ನವದೆಹಲಿ : ಬಿಜೆಪಿ ರಾಷ್ಟ್ರಾಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕಕ್ಕೆ ಅನುಮೋದನೆ, ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ನವದೆಹಲಿಯಲ್ಲಿ ಬಿಜೆಪಿ ಪರಿಷತ್ ಸಭೆ ಆರಂಭವಾಗಿದೆ.
ದೆಹಲಿಯ ಜವಹರ್ ಲಾಲ್ ನೆಹರು ಸ್ಟೇಡಿಯಂ ನಲ್ಲಿ ಆರಂಭವಾದ ಪರಿಷತ್ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಸಭೆಯಲ್ಲಿ ಗೃಹ ಸಚಿವರ ರಾಜನಾಥ್ ಸಿಂಗ್, ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ ಜೋಷಿ, ನಿತಿನ್ ಗಡ್ಕರಿ, ಅರುಣ್ ಜೇಟ್ಲಿ, ಬಿಎಸ್.ಯಡಿಯೂರಪ್ಪ, ಅನಂತ್ ಕುಮಾರ್, ಪ್ರಹ್ಲಾದ್ ಜೋಷಿ ಸೇರಿ ಹಲವರು ಭಾಗವಹಿಸಿದ್ದಾರೆ. ಅಲ್ಲದೇ ಬಿಜೆಪಿ ಆದಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, 2,300ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಸಭೆಯಲ್ಲಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ಕುರಿತು ರೂಪುರೇಷೆ, ಪಕ್ಷ ಸಂಘಟನೆ ಮೊದಲಾದ ವಿಚಾರಗಳ ಕುರಿತು ಚರ್ಚೆ ನಡೆದಿದೆ. ಅಮಿತ್ ಷಾ ಪಕ್ಷದ ಅಧ್ಯಕ್ಷರಾಗಿ ನೇಮಕವಾದ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.
ಈ ವೇಳೆ ಮಾತನಾಡಿದ ರಾಜನಾಥ್ ಸಿಂಗ್, ಅಮಿತ್ ಷಾ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಪಕ್ಷ ಅನುಮೋದನೆ ನೀಡಿದೆ. ಅವರು ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತೋಷವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಯಶಸ್ಸು ಅಮಿತ್ ಷಾಗೆ ಸೇರಬೇಕು ಎಂದು ತಿಳಿಸಿದರು.