ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ(ಕೆ.ಪಿ.ಎಸ್.ಸಿ) 2011ನೇ ಸಾಲಿನ ನೇಮಕಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಕೇಂದ್ರ ಸಚಿವ ಹೆಚ್.ಎನ್ ಅನಂತ್ ಕುಮಾರ್ ಖಂಡಿಸಿದ್ದಾರೆ.
ಕೆ.ಪಿ.ಎಸ್.ಸಿ ನೇಮಕಾತಿ ರದ್ದುಗೊಳಿಸಿರುವ ಸರ್ಕಾರದ ಕ್ರಮ, ನೆಗಡಿಯಾದರೆ ಮೂಗು ಕತ್ತರಿಸುವ ಕ್ರಮ ಎಂಬಂತಾಗಿದೆ ಎಂದು ಲೇವಡಿ ಮಾಡಿದ್ದಾರೆ.
ಆ.10ರಂದು ಬೆಂಗಳೂರಿನಲ್ಲಿ ಮಾತನಾಡಿದ ಅನಂತ್ ಕುಮಾರ್, ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಅನ್ಯಾಯವಾಗಬಾರದು, ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಮರುಪರಿಶೀಲಿಸಲಿ ಎಂದು ಹೇಳಿದ್ದಾರೆ. ಕೆ.ಪಿ.ಎಸ್.ಸಿ ಆಯ್ಕೆ ಪಟ್ಟಿ ರದ್ದುಗೊಳಿಸಿರುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಲಿ ಎಂದು ಸಲಹೆ ನೀಡಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗ 2011ನೇ ಸಾಲಿನ ನೇಮಕಾತಿ ರದ್ದು ಪಡಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಪ್ರತಿಭಟನೆ ಆ.10ರಂದೂ ಮುಂದುವರೆದಿದೆ. ಕಳೆದ 22 ದಿನಗಳಿಂದ ಫ್ರೀಡಂಪಾರ್ಕ್ನಲ್ಲಿ ನೊಂದ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ತನ್ನ ಆದೇಶವನ್ನು ಹಿಂಪಡೆಯುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ. ಉಪವಾಸ ಸತ್ಯಾಗ್ರಹದಲ್ಲಿ ನಿರತರಾಗಿರುವ ಸುಮಾರು 16 ಮಂದಿ ಅಭ್ಯರ್ಥಿಗಳು ಅಸ್ವಸ್ಥರಾಗಿದ್ದು, ಅವರನ್ನು ಮಲ್ಲೇಶ್ವರಂನಲ್ಲಿರುವ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸರ್ಕಾರ ಕೈಗೊಂಡಿರುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸಮಾಜಕಲ್ಯಾಣ ಇಲಾಖೆ ಸಚಿವ, ಹೆಚ್.ಆಂಜನೇಯ ಸ್ಪಷ್ಟಪಡಿಸಿದ್ದಾರೆ. ಸಚಿವರ ಹೇಳಿಕೆಯಿಂದ ಮತ್ತಷ್ಟು ಆಕ್ರೋಶಗೊಂಡಿರುವ ಅಭ್ಯರ್ಥಿಗಳು ಉಪವಾಸ ಸತ್ಯಾಗ್ರಹ ಮುಂದುವರೆಸಿದ್ದಾರೆ.