ಬೆಂಗಳೂರು : 2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಅಭ್ಯರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿವೆ.
ಸರ್ಕಾರದ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಹೋರಾಟ 32ನೇ ದಿನಕ್ಕೆ ಕಾಲಿಟ್ಟಿದೆ. ಆದಾಗ್ಯೂ ರಾಜ್ಯ ಸರ್ಕಾರ ಯಾವುದೇ ರೀತಿಯಲ್ಲೂ ಸ್ಪಂದಿಸುತ್ತಿಲ್ಲ.
ಈ ಹಿನ್ನಲೆಯಲ್ಲಿ ಸರ್ಕಾರದ ಕ್ರಮ ಖಂಡಿಸಿ ಅಭ್ಯರ್ಥಿಗಳು ಕಾನೂನು ಹೋರಾಟಕ್ಕೆ ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಬೃಹತ್ ರ್ಯಾಲಿ ಮೂಲಕ ವಿಧಾನಸೌಧ ಮುತ್ತಿಗೆ ಹಾಕುವ ಮೂಲಕ ಸರ್ಕಾರಕ್ಕೆ ಬಿಸಿಮುಟ್ಟಿಸಿ ಪ್ರತಿಭಟನೆಯನ್ನು ಕೈಬಿಡಲು ತೀರ್ಮಾನಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಿಂದ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ. ರೈತ ಸಂಘಟನೆ, ಕನ್ನಡಪರ ಸಂಘಟನೆ ಸೇರಿದಂತೆ 20ಕ್ಕೂ ಹೆಚ್ಚು ಸಂಘಟನೆಗಳು ಸಾಥ್ ನೀಡಿವೆ.
ಬೃಹತ್ ಪ್ರತಿಭಟನೆ ಹಿನ್ನಲೆಯಲ್ಲಿ ಪಶ್ಚಿಮ ವಲಯ ಡಿಸಿಪಿ ಲಾಬೂರಾಮ್ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. 6 ಎಸಿಪಿಗಳು, 17 ಇನ್ಸ್ ಪೆಕ್ಟರ್ ಗಳು, 10 ಕೆ.ಎಸ್.ಆರ್.ಪಿ ತುಕಡಿ, 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ನಿರ್ಧರಿಸಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧದ ಸುತ್ತಮುತ್ತ ಕೂಡ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.