ಬೆಂಗಳೂರು : ಅಕ್ರಮ ಗಣಿಗಾರಿಕೆ ನಡೆಸಿ ಸುಪ್ರೀಂ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಗಣಿ ಕಂಪನಿಗಳು, ನವೀಕರಣಕ್ಕಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಸರ್ಕಾರ ಪರವಾನಗಿ ನೀಡಬಾರದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ 13 ಪುಟಗಳನ್ನೊಳಗೊಂಡ ಪತ್ರವನ್ನು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಬರೆದಿದ್ದು, ಸರ್ಕಾರಕ್ಕೆ ನೈಜ ಕಾಳಜಿ ಇದ್ದಲ್ಲಿ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿರುವ ಗಣಿ ಕಂಪನಿಗಳಿಗೆ ಪರವಾನಗಿ ನೀಡಬಾರದು ಎಂದರು.
ಅಕ್ರಮ ಗಣಿಗಾರಿಕೆ ನಡೆಸಿ ಸರ್ಕಾರಕ್ಕೆ ನಷ್ಟ ಉಂಟುಮಾಡಿರುವ ಗಣಿ ಕಂಪನಿಗಳಿಂದ ನಷ್ಟವಾಗಿರುವ ಹಣವನ್ನು ಪಡೆಯುವಂತೆ ಹಿರೇಮಠ ತಿಳಿಸಿದ್ದಾರೆ.
ಇಂತಹ ಕಂಪನಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರಕ್ಕೆ ನಷ್ಟ ಉಂಟುಮಾಡಿರುವ ಕಂಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದ್ದಾರೆ.