ಜಮ್ಮು-ಕಾಶ್ಮೀರ : 'ಜಮ್ಮು-ಕಾಶ್ಮೀರ'ದ ಕತುವಾದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಬೆಂಬಲ ಪಡೆದು ಜಮ್ಮು-ಕಾಶ್ಮೀರದಲ್ಲಿ ಅಧಿಕಾರದಲ್ಲಿರುವ ಓಮರ್ ಅಬ್ದುಲ್ಲ ಸರ್ಕಾರ ಕೊನೆ ಕ್ಷಣಗಳನ್ನು ಎಣಿಸುತ್ತಿದೆ. ರಾಜವಂಶದ ರಾಜಕೀಯ ಜಮ್ಮು-ಕಾಶ್ಮೀರದ ಅಭಿವೃದ್ಧಿಯನ್ನು ಕೊಲ್ಲುತ್ತಿದೆ. ಕಾಶ್ಮೀರದ ಅಭಿವೃದ್ಧಿಗೆ ಕಂಟಕವಾಗಿರುವ ರಾಜವಂಶದ ರಾಜಕೀಯಕ್ಕೆ ಕೊನೆ ಹಾಡಬೇಕಿದೆ ಎಂದಿದ್ದಾರೆ. ಎಂದೆಂದಿಗೂ ಜಮ್ಮು-ಕಾಶ್ಮೀರದ ಭಾರತದ ಅವಿಭಾಜ್ಯ ಅಂಗ ಅದನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
ಜಮ್ಮು-ಕಾಶ್ಮೀರಕ್ಕೆ, ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶವನ್ನು ತಂದಿದ್ದೇನೆ. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡಬೇಕಿದೆ. ಇದರಿಂದ ಮಾತ್ರ ದೇಶ ಅಭಿವೃದ್ಧಿ ಪಥದಲ್ಲಿ ನಡೆಯಲು ಸಾಧ್ಯ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷರು ಅಭಿಪ್ರಾಯಪಟ್ಟಿದ್ದಾರೆ.
ಪಾಕಿಸ್ತಾನ ಗಡಿ ಭಾಗದಲ್ಲಿ ಗುಂಡಿನ ದಾಳಿ ನಡೆಸುತ್ತಿರುವುದನ್ನು ಖಂಡಿಸಿರುವ ಅಮಿತ್ ಶಾ, ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುತ್ತೇವೆ, ಪಾಕಿಸ್ತಾನ ನಡೆಸುತ್ತಿರುವ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.