ಬೆಂಗಳೂರು : ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಲಾಬಿ ಮುಂದುವರೆದಿದೆ. ಮಂತ್ರಿ ಸ್ಥಾನಕ್ಕಾಗಿ ಒತ್ತಡ ಹೇರುವ ನಿಟ್ಟಿನಲ್ಲಿ ಕಾಂಗ್ರೆಸ್ ನ 8 ಶಾಸಕರು ದೆಹಲಿಗೆ ಡೌಡಾಯಿಸಲಿದ್ದಾರೆ.
ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆ.3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ದೆಹಲಿಗೆ ತೆರಳು ಹೈಕಾಂಡ್ ಜತೆ ಚರ್ಚೆ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ನ 8 ಜನ ಶಾಸಕರು ಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದು, ಸಂಜೆ ದೆಹಲಿಗೆ ತೆರಳಲಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ರನ್ನು ಭೇಟಿಯಾಗಿ ಸಮಾಲೋಚನೆ ನಡೆಸುವ ಮೂಲಕ ಮಂತ್ರಿ ಸ್ಥಾನಕ್ಕಾಗಿ ತಮ್ಮನ್ನು ಪರಿಗಣಿಸುವಂತೆ ಮನವಿ ಮಾಡಲಿದ್ದಾರೆ.
ರಾಜಶೇಖರ್ ಪಾಟೀಲ್ ಹುಮ್ನಾಬಾದ್, ಈಶ್ವರ್ ಖಂಡ್ರೆ, ವಿನಯ್ ಕುಲ್ಕರ್ಣಿ, ಕೆ.ಬಿ.ಕೋಳಿವಾಡ ಸೇರಿದಂತೆ 8 ಜನರ ಶಾಸಕರ ಗುಂಪು ದೆಹಲಿಗೆ ತೆರಳುತ್ತಿದೆ.
ಈ ನಡುವೆ ನಿಗಮ ಮಂಡಳಿಗಳ ನೇಮಕಾತಿ ವಿಚಾರದಲ್ಲಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸೋತವರಿಗೆ ಸ್ಥಾನ ನೀಡಬಾರದು ಎಂದು ತಿಳಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಂಜೆ ಕಾಂಗ್ರೆಸ್ ಶಾಸಕರು ಸಭೆ ನಡೆಸಲಿದ್ದಾರೆ.