ನವದೆಹಲಿ : ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸಲು ಸೂಕ್ತ ಸ್ಥಳವನ್ನು ಗುರುತಿಸುವಂತೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೂಚನೆ ನೀಡಿದ್ದಾರೆ.
ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವ ಯೋಜನೆ ಬಗ್ಗೆ ಓಮರ್ ಅಬ್ದುಲ್ಲಾ ಗೆ ಪತ್ರ ಬರೆದಿರುವ ರಾಜನಾಥ್ ಸಿಂಗ್, ವಲಸೆ ಹೋಗಿರುವ ಪಂಡಿತರ ಮೂಲ ಸ್ಥಳದಲ್ಲೇ ಪುನರ್ವಸತಿಗಾಗಿ ಭೂಮಿ ಗುರುತಿಸುವಂತೆ ಆದೇಶಿಸಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರ ಗುರುತಿಸುವ ಸ್ಥಳಗಳಲ್ಲಿ ಪಂಡಿತರಿಗೆ ಸೂಕ್ತ ಭದ್ರತೆ ನೀಡಲೂ ರಾಜನಾಥ್ ಸಿಂಗ್ ಪತ್ರದಲ್ಲಿ ಬರೆದಿದ್ದಾರೆ.
ಈ ವರೆಗೂ 62,000 ಕಾಶ್ಮೀರಿ ಪಂಡಿತರ ಕುಟುಂಬಗಳು ದೇಶದ ವಿವಿಧ ಭಾಗಗಳಿಗೆ ವಲಸೆ ಹೋಗಿದ್ದಾರೆ ಎಂದು ತಿಳಿದುಬಂದಿದೆ. 90ರ ದಶಕದಲ್ಲಿ ಉಗ್ರಚಟುವಟಿಕೆ ನಡೆಸುತ್ತಿದ್ದವರ ಕೆಂಗಣ್ಣಿಗೆ ಗುರಿಯಾಗಿದ್ದ ಕಾಶ್ಮೀರಿ ಪಂಡಿತರು ಕಾಶ್ಮೀರ ಕಣಿವೆಯಿಂದ ಜಮ್ಮು ಸೇರಿದಂತೆ ವಿವಿಧ ಭಾಗಗಳಿಗೆ ವಲಸೆ ಹೋಗಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪಂಡಿತರಿಗೆ ಪುನರ್ವಸತಿ ಕಲ್ಪಿಸುವ ಯೋಜನೆಯನ್ನು ತ್ವರಿತಗತಿಯಲ್ಲಿ ಜಾರಿಗೊಳಿಸುತ್ತಿದೆ.
ಓಮರ್ ಅಬ್ದುಲ್ಲಾ ಅವರಿಗೆ ಬರೆದಿರುವ ಪತ್ರದಲ್ಲಿ, ಪುನರ್ವಸತಿ ಯೋಜನೆಗೆ ಕೇಂದ್ರ ಸರ್ಕಾರದ ಬದ್ಧತೆ ಎಂದು ರಾಜನಾಥ್ ಸಿಂಗ್ ಒತ್ತಿ ಹೇಳಿದ್ದಾರೆ. ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ಕೇಂದ್ರ ಸರ್ಕಾರ 500 ಕೋಟಿ ರೂಪಾಯಿಗಳನ್ನು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಮೀಸಲಿಟ್ಟಿದೆ.