ಬೆಳಗಾವಿ : ರಾಜ್ಯದಲ್ಲಿ ಪ್ರಮೋದ್ ಮುತಾಲಿಕ್ ನೇತೃತ್ವದ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳೆಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಸರ್ಕಾರ ಶ್ರೀರಾಮ ಸೇನೆ ಸಂಘಟನೆಗೆ ನಿಷೇಧ ಹೇರಿದೆ ಹಾಗೆಯೇ ರಾಜ್ಯದಲ್ಲೂ 'ಶ್ರೀರಾಮ ಸೇನೆ'ಯನ್ನು ನಿಷೇಧಿಸುವ ಬಗ್ಗೆ ಯೋಚನೆ ಮಾಡಲಾಗಿದೆ ಎಂದಿದ್ದಾರೆ.
ಶ್ರೀರಾಮ ಸೇನೆ ಹಲವು ಬಾರಿ ಧರ್ಮದ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಂಡಿದ್ದು, ಇದಕ್ಕೆ ಕಡಿವಾಣ ಹಾಕಲು ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.
ಇದೇ ವೇಳೆ ಬೆಳಗಾವಿಯನ್ನು ಎರಡನೇ ರಾಜಧಾನಿ ಮಾಡುವ ವಿಷಯದ ಬಗ್ಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಒಂದು ರಾಜ್ಯಕ್ಕೆ ಒಂದೇ ರಾಜಧಾನಿ ಇರಲು ಸಾಧ್ಯ. ಬೆಳಗಾವಿಯನ್ನು ಎರಡನೇ ರಾಜಧಾನಿ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. ಇದೇ ವೇಳೆ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಮಾಡುವ ಬಗ್ಗೆಯೂ ಸಿ.ಎಂ ಸೂಚನೆ ನೀಡಿದ್ದಾರೆ.