ಹುಬ್ಬಳ್ಳಿ : ಶ್ರೀರಾಮಸೇನೆಯನ್ನು ರಾಜ್ಯದಲ್ಲಿ ನಿಷೇಧ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಖುದ್ದು ಭೇಟಿಯಾಗಿ ಮಾತನಾಡುತ್ತೇನೆ ಎಂದು ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸೆ.15ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಈ ಬಗ್ಗೆ ಮಾತನಾಡುತ್ತೇನೆ ಎಂದರು.
ಶ್ರೀರಾಮಸೇನೆಯ ಸಮಾಜಮುಖಿ ಕೆಲಸಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು. ಮನವರಿಕೆ ನಂತರವೂ ನಿಷೇಧಕ್ಕೆ ಮುಂದಾದರೆ ಕಾನೂನು ಹೋರಾಟ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
ಶ್ರೀರಾಮಸೇನೆ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಹೇಳಿಕೆಯನ್ನು ಖಂಡಿಸಿದ ಮುತಾಲಿಕ್, ಜೋಷಿ ಒಬ್ಬ ವಿಫಲ ಬಿಜೆಪಿ ರಾಜ್ಯಾಧ್ಯಕ್ಷ. ನರೇಂದ್ರ ಮೋದಿ ಹೆಸರಿನಿಂದ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. ಶ್ರೀರಾಮಸೇನೆ ಹೆಸರನ್ನು ರಾಜಕೀಯವಾಗಿ ಮಟ್ಟಹಾಕಲು ಯತ್ನಿಸುತ್ತಿದ್ದಾರೆ ಎಂದು ಗುಡುಗಿದರು.