BW News Bureau : 'ಬಿಬಿಎಂಪಿ'ಯ ಕೇಂದ್ರ, ವಲಯವಾರು ಹಾಗೂ ವಾರ್ಡ್ ಮಟ್ಟದ ಕಚೇರಿಗಳ ಅಧಿಕಾರಿಗಳು ಹಾಗೂ ನೌಕರರು ಕರ್ತವ್ಯ ಬಹಿಷ್ಕರಿಸಿ ಸೆ.22ರಂದು ಪ್ರತಿಭಟನೆ ನಡೆಸುತ್ತಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಬಿಎಂಪಿ ಕಚೇರಿಯ ಬಾಗಿಲು ಮುಚ್ಚಿಸಿ ಅಧಿಕಾರಿಗಳು ಹಾಗೂ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಿಂದ ಪಾಲಿಕೆಗೆ ನಿಯೋಜನೆಗೊಂಡಿರುವ ಕೆ.ಎ.ಎಸ್ ಶ್ರೇಣಿಯೇತರ ಅಧಿಕಾರಿಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸುವಂತೆ ಪ್ರತಿಭಟನಾ ನಿರತರು ಒತ್ತಾಯಿಸಿದ್ದಾರೆ.
ಕೇಂದ್ರ ಕಚೇರಿ ಅಧಿಕಾರಿಗಳು ಪ್ರತಿಭಟನೆ ನಡೆಸುತ್ತಿರುವುದರಿಂದ ಪಾಲಿಕೆಯ ಅಗತ್ಯ ಸೇವೆಗಳಾದ ಆಸ್ಪತ್ರೆ, ಶಾಲಾ-ಕಾಲೇಜುಗಳನ್ನು ಹೊರತುಪಡಿಸಿ ಎಲ್ಲಾ ಸೇವೆಗಳು ಸ್ಥಗಿತಗೊಂಡಿವೆ.
ಈ ಹಿಂದೆ ಕೆ.ಎ.ಎಸ್ ಯೇತರ ಅಧಿಕಾರಿಗಳನ್ನು ಮಾತೃ ಇಲಾಖೆಗೆ ವಾಪಸ್ ಕರೆಸಿಕೊಳ್ಳುವಂತೆ ಸಿ.ಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದೆಂದು ಮೇಯರ್ ಶಾಂತಕುಮಾರಿ ಭರವಸೆ ನೀಡಿದ್ದರು. ಭರವಸೆ ಈಡೇರದ ಕಾರಣ ನೌಕರರು ಮುಷ್ಕರ ನಡೆಸುತ್ತಿದ್ದಾರೆ.