ಮುಂಬೈ : ಕಾಂಗ್ರೆಸ್-ಎನ್ ಸಿಪಿ ಮೈತ್ರಿ ಅಂತ್ಯಗೊಂಡ ಹಿನ್ನಲೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯಪಾಲ ಸಿ.ವಿದ್ಯಾಸಾಗರ ರಾವ್ ಅವರನ್ನು ಭೇಟಿ ಮಾಡಿದ ಪೃಥ್ವಿರಾಜ್ ಚವಾಣ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡುವ ಸಾಧ್ಯತೆಯಿದೆ.
ಕಾಂಗ್ರೆಸ್ ಜತೆಗಿನ ಮೈತ್ರಿ ಮುರಿದಿರುವುದಾಗಿ ರಾತ್ರಿ ಘೋಷಿಸಿದ ಕೆಲ ಹೊತ್ತಿನಲ್ಲೇ ಉಪಮುಖ್ಯಮಂತ್ರಿ ಹಾಗೂ ಎನ್ ಸಿಪಿ ಶಾಸಕಾಂಗ ಪಕ್ಷದ ನಾಯಕ ಅಜಿತ್ ಪವಾರ್ ಅವರು ರಾಜ್ಯಪಾಲರನ್ನು ಭೇಟಿಯಾಗಿ, ಪೃಥ್ವಿರಾಜ್ ಚವಾಣ್ ನೇತೃತ್ವದ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುವ ಸಂಬಂಧ ಪತ್ರವೊಂದನ್ನು ಹಸ್ತಾಂತರಿಸಿದರು.
ಅ.15ರಂದು ಮಹಾರಾಷ್ಟ್ರ ಚುನಾವಣೆ ನಡೆಯುತ್ತಿದ್ದು, ಸರ್ಕಾರ ಬಹುಮತ ಕಳೆದುಕೊಂಡಿರುವ ಹಿನ್ನಲೆಯಲ್ಲಿ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸುಮಾಡುವ ಸಾಧ್ಯತೆಯಿದ್ದು, ಈ ಸಂಬಂಧ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದು ಅಭಿಪ್ರಾಯ ಕೇಳುವ ಸಂಬಂಭವಿದೆ.
ಈ ನಡುವೆ ಎನ್ ಸಿಪಿ ಜತೆಗಿನ ಮೈತ್ರಿ ಮುರಿಯುತ್ತಿದ್ದಂತೆಯೇ ಕಾಂಗ್ರೆಸ್ ಸಮಾಜವಾದಿ ಪಕ್ಷದ ಜತೆ ಕೈಜೋಡಿಸಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಎದುರಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.