ಮೈಸೂರು : 'ವಿಜಯದಶಮಿ' ಅಂಗವಾಗಿ ಅ.4ರಂದು ನಡೆಯಲಿರುವ ಜಂಬೂ ಸವಾರಿಗೆ ಮೈಸೂರಿನಲ್ಲಿ ಸಕಲ ಸಿದ್ಧತೆಗಳು ನಡೆದಿದೆ.
ಈ ಬಾರಿ ನವಮಿ-ದಶಮಿ ಎರಡೂ ಒಟ್ಟಿಗೆ ಬಂದಿದೆ. ಮಧ್ಯಾಹ್ನ 1.01ರಿಂದ 1.31ಗಂಟೆಯೊಳಗೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂಜೆ ಸಲ್ಲಿಸಲಿದ್ದಾರೆ. ನಂತರ ಅರಮನೆಯ ಒಳಾವರಣದ ವಿಶೇಷ ವೇದಿಕೆಯಲ್ಲಿ ನಿಂತು ಅರ್ಜುನ ಹೊರಲಿರುವ 750 ಕೆ.ಜೆ. ತೂಕದ ಚಿನ್ನದ ಅಂಬಾರಿಯಲ್ಲಿರುವ ಶ್ರೀ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಇದೇ ವೇಳೆ ಮೆರವಣಿಗೆಗೆ 8000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಸಂಜೆ 7ಕ್ಕೆ ಬನ್ನಿಮಂಟಪದಲ್ಲಿ ನಡೆಯುವ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ರುಡಾಭಾಯಿ ವಾಲಾ ಅವರು ಭಾಗವಹಿಸಲಿದ್ದಾರೆ.