ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಪಾಕಿಸ್ತಾನ ಹಾಗೂ ಚೀನಾ ದೇಶಗಳು ಭಾರತದ ಮೇಲೆ ನಿರಂತರವಾಗಿ ಅತಿಕ್ರಮಣ ಮಾಡುತ್ತಿದ್ದರೂ ಪ್ರಧಾನಿ ಸುಮ್ಮನಿದ್ದಾರೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರೇಂದ್ರ ಮೋದಿ ಅವರಿಗೆ ದೇಶದ ಭದ್ರತೆಗಿಂತಲೂ ಚುನಾವಣೆ ಪ್ರಚಾರವೇ ಹೆಚ್ಚಾಗಿದೆ. ಗಡಿ ಪ್ರದೇಶದಲ್ಲಿ ನೆರೆ ರಾಷ್ಟ್ರದವರು ನಿರಂತರವಾಗಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದರೂ ಪ್ರಧಾನಿ ಯಾವುದೇ ಕ್ರಮ ಕೈಗೊಂಡಿಲ್ಲ, ಚುನಾವಣಾ ಪ್ರಚಾರದ ಬದಲು ಗಡಿ ಭದ್ರತೆ ಬಗ್ಗೆ ಮೋದಿ ಗಮನ ಹರಿಸಬೇಕು ಎಂದು ಖರ್ಗೆ ಒತ್ತಾಯಿಸಿದ್ದಾರೆ.
ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪ್ರಧಾನಿ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ಮಿತ್ರ ಪಕ್ಷ ಶಿವಸೇನೆ ಸಹ ಆಕ್ರೋಶ ವ್ಯಕ್ತಪಡಿಸಿತ್ತು. ಪ್ರಧಾನಿ ಮೋದಿ ಮಹಾರಾಷ್ಟ್ರ ಚುನಾವಣೆ ಬದಲು ದೇಶದ ಗಡಿ ಪ್ರದೇಶಗಳ ಭದ್ರತೆ ಬಗ್ಗೆ ಚಿಂತಿಸಬೇಕು ಎಂದು ಸಲಹೆ ನೀಡಿತ್ತು. ಇದೀಗ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸಹ ಪ್ರಧಾನಿ ಮೋದಿ ಕೈಗೊಂಡಿರುವ ಚುನಾವಣಾ ಪ್ರಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.