ಬೆಂಗಳೂರು : ಲೋಡ್ ಶೆಡ್ಡಿಂಗ್ ಜಾರಿ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಸರ್ಕಾರ ಕತ್ತಲೆ ರಾಜ್ಯವನ್ನು ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಮಳೆಯಾಗುತ್ತಿರುವುದರಿಂದ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಬೇಡಿಕೆಯೂ ಕಡಿಮೆಯಿದೆ. ಬೆಂಗಳೂರಿನಲ್ಲಿ 2 ಗಂಟೆ ಲೋಡ್ ಶೆಡ್ದಿಂಗ್ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 10 ಗಂಟೆ ಲೋಡ್ ಶೆಡ್ದಿಂಗ್ ಜಾರಿ ಮಾಡುವುದಾಗಿ ತಿಳಿಸಿದ್ದಾರೆ. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಇಲಾಖೆಯ ಮೇಲೆ ಗಮನಹರಿಸದೇ ಸಿಎಂ ಖುರ್ಚಿಯ ಮೇಲೆ ಗಮನಹರಿಸಿದ್ದಾರೆ ಎಂದರು.
ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಜಾರಿ ಮಾಡಿ ರಾಜ್ಯವನ್ನು ಕತ್ತಲೆ ರಾಜ್ಯವನ್ನಾಗಿಸಿ, ಅದನ್ನು ಸರ್ಕಾರದ ಮೇಲೆ ಹಾಕಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸುವ ತಂತ್ರ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಅಲ್ಲದೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುವ ಯತ್ನವನ್ನು ಕಾಂಗ್ರೆಸ್ ನಾಯಕರು ನಡೆಸಿದ್ದು, ನಿಗದಿತ ಸಮಯದಲ್ಲೇ ಚುನಾವಣೆ ನಡೆಯಬೇಕು ಎಂದು ಒತ್ತಾಯಿಸಿದರು.