ಚಂಡೀಗಢ : ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಹರ್ಯಾಣ ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ ಐವರು ನಾಯಕರ ನಡುವೆ ಪೈಪೋಟಿ ಆರಂಭವಾಗಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಮನೋಹರ್ ಲಾಲ್ ಖಟ್ಟರ್, ರಾಮ್ ಬಿಲಾಸ್ ಶರ್ಮಾ, ಕ್ಯಾಪ್ಟನ್ ಅಭಿಮನ್ಯು ಹಾಗೂ ಕೃಷ್ಣನ್ ಗುಜ್ಜರ್ ಅವರು ತೀವ್ರ ಪೈಪೋಟಿ ನಡೆಸಿದ್ದಾರೆ.
ಇಂದು ಹರ್ಯಾಣಕ್ಕೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹಾಗೂ ದಿನೇಶ್ ಶರ್ಮಾ ನೇತೃತ್ವದ ವೀಕ್ಷಕರ ತಂಡ ಭೇಟಿ ನೀಡಲಿದ್ದು, ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸಿಎಂ ಅಭ್ಯರ್ಥಿ ಕುರಿತು ಚರ್ಚೆ ನಡೆಯಲಿದೆ.
ಈ ನಡುವೆ ಮನೋಹರ ಲಾಲ್ ಖಟ್ಟರ್ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬುಲಾವ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಹರ್ಯಾಣದಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿ ಯಾರಾಗುತ್ತಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.