ಗುಲ್ಬರ್ಗಾ : ಕೆಜೆಪಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಿ.ಆರ್.ಪಾಟೀಲ್ ಶೀಘ್ರದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.
ಗುಲ್ಬರ್ಗಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮೆಚ್ಚಿ ತಾವು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದರು.
ಈ ಬಗ್ಗೆ ಬಿಜೆಪಿ ನಾಯಕರೊಂದಿಗೆ ತಾವು ಹಾಗೂ ಗುರುಪಾಟೀಲ್ ಮಾತುಕತೆ ನಡೆಸಿರುವುದಾಗಿ ಸ್ಪಷ್ಟಪಡಿಸಿದರು. ಕಾಂಗ್ರೆಸ್ ನಿಂದ ಸೂಕ್ತ ಬೆಂಬಲ ಸಿಗುತ್ತಿಲ್ಲ ಹೀಗಾಗಿ ಬಿಜೆಪಿ ಸೇರಲು ನಿರ್ಧರಿಸಿರುವುದಾಗಿ ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಸಂಸ್ಕೃತಿಗೆ ಹೊಂದಿಕೊಳ್ಳಲಾಗುತ್ತಿಲ್ಲ, ಹೀಗಾಗಿ ಸಮರ್ಪಕವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಬಿ.ಆರ್.ಪಾಟೀಲ್, ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದರು. ಆದರೆ ಈಗ ಕಾಂಗ್ರೆಸ್ ನಿಂದ ಸೂಕ್ತ ಸ್ಪಂದನೆ ಸಿಗುತ್ತಿಲ್ಲ, ಕ್ಷೇತ್ರ ಅಭಿವೃದ್ಧಿಯ ಬಗ್ಗೆ ತಾರತಮ್ಯವೆಸಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಸೇರಲು ನಿರ್ಧರಿಸಿದ್ದಾರೆ.