ಮುಂಬೈ : ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲು ಬಿಜೆಪಿಗೆ ಬಾಹ್ಯ ಬೆಂಬಲ ಘೋಷಿಸಿರುವ ಎನ್ ಸಿಪಿ ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದೆ.
ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಮುಂದಾಗಿರುವ ಶರದ್ ಪವಾರ್ ನೇತೃತ್ವದ ಎನ್ ಸಿಪಿ ಅವಕಾಶವಾದಿ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಟೀಕಿಸಿದ್ದಾರೆ.
ಮಹಾರಾಷ್ಟ್ರದಲ್ಲಿ 15 ವರ್ಷ ಕಾಂಗ್ರೆಸ್ ಜತೆ ಸೇರಿ ಆಡಳಿತ ನಡೆಸಿರುವ ಇವರು ಆಕಾಶದಿಂದ ಭೂಮಿಯವರೆಗೂ ಭ್ರಷ್ಟಾಚಾರ ನಡೆಸಿದ್ದಾರೆ. ತಮ್ಮ ಹಗರಣವನ್ನು ಮುಚ್ಚಿಕೊಳ್ಳಲು ಈಗ ಬಿಜೆಪಿ ಜತೆ ಮೈತ್ರಿಗೆ ಮುಂದಾಗಿದೆ ಎಂದು ಕಿಡಿಕಾರಿದ್ದಾರೆ.
ಭ್ರಷ್ಟ ಪಕ್ಷದಿಂದ ಮಹಾರಾಷ್ಟ್ರ ಅಭಿವೃದ್ಧಿಯಾಗಬೇಕಿಲ್ಲ, ಮಹಾರಾಷ್ಟ್ರದ ಅಭಿವೃದ್ಧಿ ಎಂಬುದು ನಿಮ್ಮ ಭ್ರಷ್ಟಾಚಾರವನ್ನು ಜನರಿಂದ ಮರೆಮಾಚುವ ನಾಟಕ ಎಂದು ವ್ಯಂಗ್ಯವಾಡಿದ್ದಾರೆ.
ಮಹಾರಾಷ್ಟ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಸಿದ್ಧ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿಕೆ ನೀಡಿದ್ದರು. ಈ ನಿಟ್ಟಿನಲ್ಲಿ ಉದ್ಧವ್ ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ.