ನವದೆಹಲಿ : ದೇಶದ ಪ್ರಮುಖ ನಗರಗಳಲ್ಲಿ ಉಗ್ರರ ದಾಳಿ ನಡೆಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಉಗ್ರರ ವಿಧ್ವಂಸಕ ಕೃತ್ಯ ನಡೆಯುವುದಿಲ್ಲ ಎಂದು ಉಗ್ರರ ಚಟುವಟಿಕೆಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ, ಈ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ ಎಂದು ಮಾಧ್ಯಮದವರಿಗೆ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಉಗ್ರರು ದೇಶದ ಪ್ರಮುಖ ನಗರಗಳಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆಗಳಿವೆ ಎಂದು ಎನ್.ಎಸ್.ಜಿ ಡಿ.ಜಿ ಜಯಂತ್ ಚೌಧರಿ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿರುವ ರಾಜನಾಥ್ ಸಿಂಗ್, ಉಗ್ರ ಚಟುವಟಿಕೆಯನ್ನು ನಿರ್ಲಕ್ಷಿಸುವಂತಿಲ್ಲ ಎಂದಿದ್ದಾರೆ.
ಇದೇ ವೇಳೆ ದೀಪಾವಳಿ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳಿಗೂ ಕಟ್ಟೆಚ್ಚ ವಹಿಸುವಂತೆ ಗೃಹ ಸಚಿವಾಲಯ ನೀಡಿರುವ ಸೂಚನೆ ಬಗ್ಗೆಯೂ ಪ್ರತಿಕ್ರಿಯಿಸಿರುವ ಅವರು, ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋಮುಗಲಭೆ ಉಂಟಾಗದಂತೆ ಎಚ್ಚರ ವಹಿಸುವಂತೆ ಸೂಚನೆ ನೀಡುತ್ತೇವೆ. ಎಂದಿನಂತೆ ಈ ಬಾರಿಯೂ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದ್ದಾರೆ.
ದೀಪಾವಳಿ ಅಂಗವಾಗಿ ದೇಶದ ವಿವಿಧ ಭಾಗಗಳಲ್ಲಿ ಕಾಳಿ ಪೂಜೆ ನಡೆಸಲಾಗುತ್ತದೆ. ಈ ಸಂದರ್ಭದಲ್ಲಿ ಯಾವುದೇ ಕೋಮುಗಲಭೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸುತ್ತೋಲೆ ಹೊರಡಿಸಿದೆ.