ಬೆಂಗಳೂರು : ರಾಜ್ಯದಲ್ಲಿನ ಅತ್ಯಾಚಾರ ಪ್ರಕರಣಗಳ ಕುರಿತು ಮಾಧ್ಯಮಗಳ ವರದಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಕೆ.ಜೆ.ಜಾರ್ಜ್, ಮಾಧ್ಯಮಗಳು ಟಿ.ಆರ್.ಪಿಗಾಗಿ ಅತ್ಯಾಚಾರ ಪ್ರಕರಣಗಳನ್ನು ವರದಿ ಮಾಡುತ್ತಿವೆ ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಸಚಿವರು ಆವೇಶದಿಂದ ಇಂತಹ ಹೇಳಿಕೆ ನೀಡಿರಬಹುದು. ಅತ್ಯಾಚಾರದಂತಹ ಪ್ರಕರಣಗಳ ಬಗ್ಗೆ ಮಾಧ್ಯಮಗಳು ದಿನವಿಡೀ ವರದಿ ಮಾಡುವುದು ಸರಿಯಲ್ಲ ಎಂದರು.
ರಾಜ್ಯದಲ್ಲಿ ಅತ್ಯಾಚಾರದಂತಹ ಪ್ರಕರಣ ನಡೆಯುತ್ತಿರುವುದು ದುರದೃಷ್ಟಕರ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕಾನೂನಿನ ಕ್ರಮಕ್ಕೆ ಆದೇಶ ನೀಡಿದ್ದಾರೆ. ಆದರೆ ಬಿಜೆಪಿಯವರು ಈ ಬಗ್ಗೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.