ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ವಿಫಲವಾಗಿರುವ ಸರ್ಕಾರದ ವಿರುದ್ಧ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ಮಾರ್ಗಸೂಚಿ ಅಳವಡಿಸುವ ಕುರಿತು ನ.7ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ಸರ್ಕಾರದ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಮಾರ್ಗಸೂಚಿ ಅಳವಡಿಕೆಗೆ ಎಷ್ಟು ಕಾಲಾವಕಾಶಬೇಕು ಎಂದು ಪ್ರಶ್ನಿಸಿದೆ.
ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳದಿರುವುದೂ ಅಲ್ಲದೇ, ಮಾಧ್ಯಮಗಳ ಮೇಲೆ ಗೂಬೆ ಕೂರಿಸುತ್ತೀರಾ? ಎಂದು ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮಾಧ್ಯಮಗಳು ಸಮಾಜವನ್ನು ತಿದ್ದುವ ಕೆಲಸ ಮಾಡುತ್ತಿವೆ, ರಾಜ್ಯದಲ್ಲಿ 50 ಸಾವಿರ ಸರ್ಕಾರಿ ಶಾಲೆಗಳಿವೆ, ಮಾರ್ಗಸೂಚಿ ಅಳವಡಿಕೆಗೆ ಸಮಿತಿ ರಚನೆ ಮಾಡುತ್ತೇವೆಂದು ಕಾಲಹರಣ ಮಾಡುತ್ತಿದ್ದೀರಿ, ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಬರೀ ಮೊಬೈಲ್ನಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಇಂತಹ ಅಧಿಕಾರಿಗಳ ವಿರುದ್ಧ ಏನು ಕ್ರಮಕೈಗೊಂಡಿದ್ದೀರಿ? ಎಂದು ಶಿಕ್ಷಣ ಇಲಾಖೆ ಆಯುಕ್ತರನ್ನ ಹೈಕೋರ್ಟ್ ಪ್ರಶ್ನಿಸಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದರೂ ನಿದ್ದೆಯಲ್ಲಿ ಮುಳುಗಿರುವ ಸರ್ಕಾರ ಹೈಕೋರ್ಟ್ ಚಾಟಿ ಏಟಿನಿಂದಲಾದರೂ ಎಚ್ಚರಗೊಳ್ಳುವುದೇ ಎಂದು ಕಾದು ನೋಡಬೇಕಾಗಿದೆ.