ಬೆಂಗಳೂರು : ವಿದ್ಯುತ್ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಸೌರ ಶಕ್ತಿಯಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಚಾಲನೆ ನೀಡಲಾಗಿದ್ದು, 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮನೆಗಳ ಛಾವಣಿ ಮೇಲೆ ಸೌರಶಕ್ತಿ ವಿದ್ಯುತ್ ಉತ್ಪಾದಕ ಘಟಕಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಎಲ್ಲ ಮನೆಗಳ ಮೇಲೂ ಸೌರಶಕ್ತಿ ವಿದ್ಯುತ್ ಘಟಕ ಸ್ಥಾಪಿಸಿಕೊಳ್ಳಬಹುದಾಗಿದೆ ಎಂದರು.
ಸೌರಶಕ್ತಿ ವಿದ್ಯುತ್ ಅಳವಡಿಸಿಕೊಳ್ಳುವವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಮೊದಲು ಅರ್ಜಿ ಸಲ್ಲಿಸಿದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಸೌರ ವಿದ್ಯುತ್ನಿಂದ ಮನೆಬಳಕೆಗೆ ಸಾಕಾಗುವಷ್ಟು ವಿದ್ಯುತ್ ಉತ್ಪಾದನೆಯಾಗಲಿದ್ದು, ಹೆಚ್ಚಾದ ವಿದ್ಯುತ್ತನ್ನು ಸರ್ಕಾರಕ್ಕೆ ಮಾರಾಟ ಮಾಡಬಹುದಾಗಿದೆ ಎಂದು ತಿಳಿಸಿದರು.
ಪ್ರತಿ ಯೂನಿಟ್ ವಿದ್ಯುತ್ನ್ನು 9.56 ಪೈಸೆಗೆ ಖರೀದಿಸಲಾಗುವುದು. ಈ ಹಿನ್ನೆಲೆಯಲ್ಲಿ ನಾಗರಿಕರು ಸೌರವಿದ್ಯುತ್ ಸದುಪಯೋಗಪಡಿಸಿಕೊಳ್ಳುವಂತೆ ಸಚಿವರು ಕರೆ ನೀಡಿದ್ದಾರೆ.