ಬೆಂಗಳೂರು : 'ನೈತಿಕ ಪೊಲೀಸ್ ಗಿರಿ'ವಿರೋಧಿಸಿ ಬೆಂಗಳೂರಿನಲ್ಲಿ ನ.22ರಂದು ಆಯೋಜಿಸಲಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ.
ಮಂಗಳೂರಿನ ಮಹಿಳಾ ದೌರ್ಜನ್ಯ ವಿರೋಧಿ ಸಮಿತಿ ಅಧ್ಯಕ್ಷೆ ವಿದ್ಯಾ ದಿವಾಕರನ್ ಬೆಂಗಳೂರಿನ ಎಂ.ಜಿ ರೋಡ್ ನಲ್ಲಿ ಕಿಸ್ ಆಫ್ ಲವ್ ಕಾರ್ಯಕ್ರಮ ಆಯೋಜಿಸಿದ್ದಾರೆ. ಕಿಸ್ ಆಫ್ ಲವ್ ಹೆಸರಿನಲ್ಲಿ ಸಂಸ್ಕೃತಿಗೆ ವಿರೋಧವಾಗಿ ನಡೆಸುತ್ತಿರುವ ಕಾರ್ಯಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕಿಸ್ ಆಫ್ ಲವ್ ಕಾರ್ಯಕ್ರಮ ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ಪ್ರತಿಕ್ರಿಯಿಸಿರುವ ಹಿರಿಯ ಸಂಶೋಧಕ ಚಿದಾನಂದ ಮೂರ್ತಿ ಅವರು ಭಾರತೀಯ ಸಂಸ್ಕೃತಿಗೆ ವಿರುದ್ಧವಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮ ನಡೆಸಲು ಗೃಹ ಸಚಿವರು ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದಾರೆ.
ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಕೆ.ಜೆ. ಜಾರ್ಜ್ ಕಿಸ್ ಆಫ್ ಲವ್ ಹೆಸರಿನಲ್ಲಿ ಸಂಸ್ಕೃತಿಯಿಂದ ಹೊರತಾದ ಚಟುವಟಿಕೆ ನಡೆಸಿದರೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಕಿಸ್ ಆಫ್ ಲವ್ ವಿಚಾರದ ಬಗ್ಗೆ ಮಾತನಾಡಿದ ಅವರು, ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗುವುದು. ಕಾನೂನು ವಿರುದ್ಧವಾಗಿ ನಡೆದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.