ಬೆಂಗಳೂರು : 'ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ'ದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ನ.24ರಂದು ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. ಜನಾರ್ದನ ರೆಡ್ಡಿ ಅವರಿಗೆ ಇನ್ನೂ 3 ಪ್ರಕರಣಗಳಲ್ಲಿ ಜಾಮೀನು ದೊರೆಯಬೇಕಿರುವ ಹಿನ್ನೆಲೆಯಲ್ಲಿ ರೆಡ್ಡಿ ಅವರಿಗೆ ಜೈಲಿನಿಂದ ಬಿಡುಗಡೆಯ ಭಾಗ್ಯ ದೊರೆತಿಲ್ಲ.
ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಜನಾರ್ದನ ರೆಡ್ಡಿ, ಶಾಸಕರಾದ ಸತೀಶ್ ಸೈಲ್, ನಾಗೇಂದ್ರ, ಸುರೇಶ್ಬಾಬು, ಆನಂದ್ ಸಿಂಗ್ ಹಾಗೂ ಅರಣ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸೇರಿದಂತೆ ಒಟ್ಟು 18 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿತ್ತು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ ನಲ್ಲಿ ಬೆಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿವೇಕ್ ಹೆಬ್ಬಾರ್ ಅವರಿಗೆ ಸಿಬಿಐ ನ್ಯಾಯಾಲಯ ಜಾಮೀನು ನೀಡಿತ್ತು.
ಅಸೋಸಿಯೇಟೆಡ್ ಮೈನಿಂಗ್ ಕಂಪನಿ (ಎ.ಎಂ.ಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲೂ ಅಗಸ್ಟ್.6ರಂದು ಜನಾರ್ದನ ರೆಡ್ಡಿಗೆ ಬೆಂಗಳೂರಿನ ಸಿ.ಬಿ.ಐ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.