ನವದೆಹಲಿ : ಸಂವಿಧಾನದ 370ನೇ ವಿಧಿ ಜಮ್ಮು-ಕಾಶ್ಮೀರದ ಚುನಾವಣಾ ವಿಷಯ ಅಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಜಮ್ಮು-ಕಾಶ್ಮೀರಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನದ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಈಗಾಗಲೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಇದು ಚುನಾವಣಾ ವಿಷಯವಾಗುವುದಿಲ್ಲ ಎಂದು ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ಜಮ್ಮು-ಕಾಶ್ಮೀರಕ್ಕೆ ಬೇಕಾಗಿರುವುದು ಉತ್ತಮ ಆಡಳಿತ, ಕಾಂಗ್ರೆಸ್ ಹಾಗೂ ಓಮರ್ ಅಬ್ದುಲ್ಲಾ ನೇತೃತ್ವದ ಸರ್ಕಾರಗಳೂ ಸೇರಿದಂತೆ ಈ ವರೆಗೂ ಜಮ್ಮು-ಕಾಶ್ಮೀರದಲ್ಲಿ ಅಸ್ತಿತ್ವಕ್ಕೆ ಬಂದಿರುವ ಎಲ್ಲಾ ಸರ್ಕಾರಗಳೂ ಅಭಿವೃದ್ಧಿ ಕೆಲಸಗಳನ್ನು ಕಡೆಗಣಿಸಿವೆ. ಜನರನ್ನು ಮೂರ್ಖರನ್ನಾಗಿಸಿವೆ. ಈ ಹಿನ್ನೆಲೆಯಲ್ಲಿ ಈ ಬಾರಿ ಜಮ್ಮು-ಕಾಶ್ಮೀರದ ಜನತೆ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಲಿದ್ದಾರೆ ಎಂದು ಕೇಂದ್ರ ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಶ್ಮೀರದ ಗಡಿ ಭಾಗದಲ್ಲಿ ಪಾಕ್ ಯೋಧರು ನಡೆಸುತ್ತಿರುವ ಗುಂಡಿನ ದಾಳಿಗೆ ಬಿ.ಎಸ್.ಎಫ್ ಯೋಧರು ತಕ್ಕ ಉತ್ತರ ನೀಡಿದ್ದಾರೆ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ.