K R Puram : ಚಿಂತಾಮಣಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿ, ಮೂರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂ ನಲ್ಲಿ ನಡೆದಿದೆ.
ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನ ಡಿಸೇಲ್ ಟ್ಯಾಂಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಬಸ್ ನ್ನು ವ್ಯಾಪಿಸಿದೆ. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅನಾಹುತ ಸಂಭವಿಸಿಲ್ಲ.
ಘಟನೆ ನಡೆದ ತಕ್ಷಣವೇ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದ ಕೆ.ಆರ್ ಪುರಂ ಸುತ್ತಮುತ್ತಲ ಪ್ರದೇಶದಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಸಂಚಾರಿ ಪೊಲೀಸರು ವಾಹನ ದಟ್ಟಣೆ ನಿಯಂತ್ರಿಸುತ್ತಿದ್ದಾರೆ. ಬೆಂಕಿ ಹೊತ್ತಿಕೊಂಡಿದ್ದ ಬಸ್ ನ್ನು ಸ್ಥಳದಿಂದ ತೆರವುಗೊಳಿಸಲಾಗುತ್ತಿದೆ. ಬೆಂಕಿಗೆ ಆಹುತಿಯಾಗಿದ್ದ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.