ನವದೆಹಲಿ : ಬಿಜೆಪಿ ಮುಖಂಡರು ಸಾರ್ವಜನಿಕವಾಗಿ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.
ನವದೆಹಲಿಯಲ್ಲಿ ಸಾರ್ವಜನಿಕ ಸಮಾರಂಭವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರ ಪ್ರಕರಣದ ಹಿನ್ನಲೆಯಲ್ಲಿ ಎಲ್ಲ ಬಿಜೆಪಿ ಸಚಿವರು, ಸಂಸದರು ಮತ್ತು ಮುಖಂಡರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಚ್ಚರಿಕೆ ನೀಡಿದ್ದಾರೆ. 'ಜನಪ್ರತಿನಿಧಿಗಳು ಸಾರ್ವಜನಿಕವಾಗಿ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು, ಧರ್ಮ ಅಥವಾ ವೈಯುಕ್ತಿಕ ನಿಂದನೆಗಳನ್ನು ತಾವು ಸಹಿಸುವುದಿಲ್ಲ' ಎಂದು ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ಎಲ್ಲ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ನವದೆಹಲಿಯಲ್ಲಿ ಸಂಸತ್ನ ಉಭಯ ಸದನಗಳ ಬಿಜೆಪಿಯ ಎಲ್ಲ 325 ಸಂಸದರೊಂದಿಗೆ ಸಭೆ ನಡೆಸಲಾಗಿದ್ದು, ಎಚ್ಚರಿಕೆ ತಪ್ಪದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸದರಿಗೆ ಕಿವಿಮಾತು ಹೇಳಿದ್ದಾರೆ. ಅಲ್ಲದೆ ಸಭೆಯಲ್ಲಿ ದೆಹಲಿ ವಿಧಾನಸಭೆ ಚುನಾವಣೆ ಕುರಿತು ಪಕ್ಷ ಕೈಗೊಳ್ಳಬೇಕಾದ ನಿರ್ಣಯಗಳ ಕುರಿತಾಗಿಯೂ ಚರ್ಚಿಸಲಾಗಿದ್ದು, ಪ್ರಮುಖವಾಗಿ ಆಮ್ ಆದ್ಮಿ ಪಕ್ಷವನ್ನು ಎದುರಿಸುವ ಕುರಿತು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.