ನವದೆಹಲಿ : ವಿವಾದಗಳನ್ನು ಬಿಟ್ಟು ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯ ವಿಪಕ್ಷ ಸದಸ್ಯರಿಗೆ ಮನವಿ ಮಾಡಿದ್ದಾರೆ.
ಸಾಧ್ವಿ ನಿರಂಜನ ಜ್ಯೋತಿ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ಡಿ.5ರಂದೂ ಸಂಸತ್ ನ ಉಭಯ ಕಲಾಪದಲ್ಲೂ ವಿಪಕ್ಷ ಸದಸ್ಯರು ಗದ್ದಲವೆಬ್ಬಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಲೋಕಸಭೆಯಲ್ಲಿ ಸ್ಪಷ್ಟನೆ ನೀಡಿದ್ದು ವಿವಾದಗಳನ್ನು ಬದಿಗಿರಿಸಿ ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡೋಣ, ವಿವಾದಾತ್ಮಕ ಹೇಳಿಕೆ ಬಗ್ಗೆ ಸಾಧ್ವಿ ನಿರಂಜನ ಜ್ಯೋತಿ ಅವರು ಈಗಾಗಲೇ ಕ್ಷಮೆ ಯಾಚಿಸಿದ್ದಾರೆ. ಹೇಳಿಕೆ ಬಗ್ಗೆ ಅನಗತ್ಯ ಚರ್ಚೆ ನಡೆಸಿದರೆ ಮಹತ್ವದ ವಿಷಯಗಳ ಬಗ್ಗೆ ಚರ್ಚೆಗೆ ಸಮಯ ಸಿಗುವುದಿಲ್ಲ ಆದ್ದರಿಂದ ದೇಶದ ಅಭಿವೃದ್ಧಿಗೆ ಪೂರಕವಾಗುವ ಅಂಶಗಳ ಬಗ್ಗೆ ಚರ್ಚಿಸೋಣ ಎಂದು ಪ್ರಧಾನಿ ಹೇಳಿದ್ದಾರೆ.
ಸಾಧ್ವಿ ನಿರಂಜನ ಜ್ಯೋತಿ ಅವರು ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಸಚಿವೆ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳ ಸದಸ್ಯರು ಪಟ್ಟು ಹಿಡಿದಿದ್ದಾರೆ. ಕಲಾಪದಲ್ಲಿ ನಿರಂತರ ಕೋಲಾಹಲ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಸತ್ ಕಲಾಪಕ್ಕೆ ಅಡ್ಡಿ ಉಂಟಗಿದೆ.