ಇಸ್ಲಾಮಾಬಾದ್ : 'ಪಾಕಿಸ್ತಾನ'ದ ಪೇಷಾವರ್ ನಲ್ಲಿ ಉಗ್ರರು ಬಾಂಬ್ ಸ್ಫೋಟಿಸಿದ್ದು 12 ಜನ ಶಾಲಾ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಡಿ.16ರಂದು ಮಧ್ಯಾಹ್ನದ ವೇಳೆಯಲ್ಲಿ ಪೇಷಾವರ್ ನಲ್ಲಿರುವ ಶಾಲೆಗೆ ನುಗ್ಗಿದ ಉಗ್ರರು ಬಾಂಬ್ ಸ್ಫೋಟಿಸಿದ್ದು ಮನಸೋ ಇಚ್ಛೆ ಗುಂಡಿನ ದಾಳಿ ನಡೆಸಿದ್ದಾರೆ. ಆರು ಜನ ಉಗ್ರರು ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿರುವ ಬಗ್ಗೆ ಮಾಹಿತಿ ದೊರೆತಿದೆ. ಘಟನೆಯಲ್ಲಿ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಒತ್ತೆಯಾಳಾಗಿರುವ ವಿದ್ಯಾರ್ಥಿಗಳನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ. ಪ್ರಕರಣದಲ್ಲಿ 6 ಆತ್ಮಾಹುತಿ ಬಾಂಬರ್ ಗಳಿದ್ದು ಪಾಕಿಸ್ತಾನದ ತಾಲೀಬಾನ್ ಸಂಘಟನೆ ಘಟನೆಯ ಹೊಣೆ ಹೊತ್ತಿದೆ.
ಶಾಲಾ ಆವರಣದಲ್ಲಿ ಉಗ್ರರು ಭದ್ರತಾ ಸಿಬ್ಬಂದಿಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ. ಉಗ್ರರ ದಾಳಿಯನ್ನು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಖಂಡಿಸಿದ್ದಾರೆ. ದಾಳಿಯ ತೀವ್ರತೆ ಹೆಚ್ಚಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.