ನವದೆಹಲಿ : 'ಜನತಾ ಪರಿವಾರ' ಉತ್ತರ ಪ್ರದೇಶ ಹಾಗೂ ಬಿಹಾರಕ್ಕೆ ಮಾತ್ರ ಸೀಮಿತವಾಗಿಲ್ಲ, ನಾವು ದೆಹಲಿಯಲ್ಲಿ ಅಧಿಕಾರ ಪಡೆಯುವುದು ಖಚಿತ ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.
ಡಿ.22ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಜನತಾ ಪರಿವಾರ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮುಲಾಯಂ ಸಿಂಗ್ ಯಾದವ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ. ಚುನಾವಣಾ ಪೂರ್ವ ಭರವಸೆಗಳು ಈಗೆಲ್ಲಿ ಹೋದವು ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಜೆಡಿಯು ನಾಯಕ ನಿತೀಶ್ ಕುಮಾರ್, ಚುನಾವಣೆಗೂ ಮುನ್ನ ನರೇಂದ್ರ ಮೋದಿ ಕಪ್ಪುಹಣ ವಾಪಸ್ ತರುವುದಾಗಿ ಹೇಳಿದ್ದರು. ಆದರೆ ಕಪ್ಪುಹಣ ವಾಪಸ್ ತರಲು ವಿಳಂಬವೇಕೆ ಎಂದು ಪ್ರಶ್ನಿಸಿದ್ದಾರೆ.
ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮತ್ತೋರ್ವ ಮುಖಂಡ ಲಾಲೂ ಪ್ರಸಾದ್ ಯಾದವ್, ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಮೋಸ ಮಾಡುತ್ತಿದ್ದಾರೆ. ಪ್ರಧಾನಿಯಾಗುವುದಕ್ಕೂ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ.
ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಎಸ್.ಪಿ ಮುಖಂಡ ಅಜಂಖಾನ್, ಜೆಡಿಯು ನಾಯಕ ಶರದ್ ಯಾದವ್ ಸೇರಿದಂತೆ ಹಲವು ನಾಯಕರು ಧರಣಿಯಲ್ಲಿ ಭಾಗವಹಿಸಿದ್ದಾರೆ.