ನವದೆಹಲಿ/ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದಾರೆ.
ನವದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಇಂಟಲಿಜನ್ಸ್ ಬ್ಯೂರೋ ಮುಖ್ಯಸ್ಥರು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಬಾಂಬ್ ಸ್ಫೋಟ ಪ್ರಕರಣ ಹಿನ್ನಲೆಯಲ್ಲಿ ದೇಶದಾದ್ಯಂತ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.
ಈ ನಡುವೆ ದೇಶದ ಎಲ್ಲಾ ಮಹಾನಗರಗಳಲ್ಲೂ ಹೈ ಅಲರ್ಟ್ ಘೋಷಿಸುವಂತೆ ಕೇಂದ್ರ ಗೃಹ ಸಚಿವಾಲಯ ಪೊಲೀಸ್ ಇಲಾಖೆಗೆ ಸೂಚಿಸಿದ್ದು, ದೆಹಲಿ, ಮುಂಬೈ, ಕೊಲ್ಕತ್ತಾ, ಹೈದ್ರಾಬಾದ್, ಚೆನ್ನೈನ ಜನ ನಿಬಿಡ ಪ್ರದೇಶ ಹಾಗೂ ಬಸ್, ರೈಲು, ವಿಮಾನ ನಿಲ್ದಾಣ ಹಾಗೂ ಮೆಟ್ರೋ ಸ್ಟೇಷನ್ ಗಳಲ್ಲಿ ಬಿಗಿ ಬಂದೋ ಬಸ್ ಕೈಗೊಳ್ಳಲಾಗಿದೆ. ಬಾಂಬ್ ಪತ್ತೆ ದಳ ಹಾಗೂ ಶ್ವಾನ ದಳಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ.
ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ, ಪ್ರಕರಣದ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಉನ್ನತ ಮಟ್ಟದ ಸಭೆ ಆರಂಭವಾಗಿದ್ದು, ಸಭೆ ಬಳಿಕ ವರದಿ ನೀಡಲಾಗುವುದು ಎಂದು ತಿಳಿದುಬಂದಿದೆ.