ಬೆಂಗಳೂರು : ಬೆಂಗಳೂರಿನಲ್ಲಿ ಜ.19ರಂದು ನಡೆಯಬೇಕಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆ ರದ್ದುಗೊಂಡಿದೆ. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ನಡೆದಿರುವ ಕಾರಣ ಸಭೆಯನ್ನು ರದ್ದುಗೊಳಿಸಲಾಗಿದೆ.
ಜ.19,20ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಸಭೆಯನ್ನು ರದ್ದುಗೊಳಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಸೇರಿದಂತೆ ಕೇಂದ್ರ ಸಚಿವರು ಬೆಂಗಳೂರಿಗೆ ಆಗಮಿಸಬೇಕಿದ್ದರಿಂದ ಅತಿ ಹೆಚ್ಚು ಭದ್ರತೆ ನೀಡಬೇಕಿತ್ತು. ಆದರೆ ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿರುವ ಚರ್ಚ್ ಸ್ಟ್ರೀಟ್ ನಲ್ಲಿ ಬಾಂಬ್ ಸ್ಫೋಟಗೊಂಡಿದ್ದು ಹೆಚ್ಚಿನ ಭದ್ರತೆ ನೀಡಲು ಸಾಧ್ಯವಾಗದ ಕಾರಣ ಸಭೆಯನ್ನು ರದ್ದುಗೊಳಿಸಲಾಗಿದೆ.
ಇನ್ನು ಜ.3ರಂದು ಅಮಿತ್ ಶಾ ನೇತೃತ್ವದಲ್ಲಿ ನಡೆಯಬೇಕಿರುವ ಬಿಜೆಪಿ ನಾಯಕರ ಸಭೆ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ. ರದ್ದುಗೊಂಡಿರುವ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲೇ ನಡೆಯಲಿದ್ದು ಮುಂದಿನ ದಿನಾಂಕ ಇನ್ನೂ ನಿಗದಿಯಾಗಿಲ್ಲ