ನವದೆಹಲಿ : 'ಸಾಹಿತ್ಯ ಕ್ಷೇತ್ರ'ದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಎಸ್.ಎಲ್ ಭೈರಪ್ಪ ಅವರಿಗೆ ಕೇಂದ್ರ ಸರ್ಕಾರ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿರುವ ಸಧ್ಯತೆಗಳಿವೆ.
ಕಳೆದ ಬಾರಿಯೇ ಎಸ್.ಎಲ್ ಭೈರಪ್ಪ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ದೊರೆಯಬೇಕಿತ್ತು ಆದರೆ ಕೊನೆ ಕ್ಷಣದಲ್ಲಿ ಅದು ಬೇರೊಬ್ಬರ ಪಾಲಾಗಿತ್ತು. ಇದೀಗ ಕೇಂದ್ರ ಸರ್ಕಾರ ಭೈರಪ್ಪ ಅವರಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಿದೆ ಎಂದು ಹೇಳಲಾಗಿದೆ. ಈಗಾಗಲೇ ಆಯ್ಕೆ ಸಮಿತಿಯು ಅವರ ಹೆಸರನ್ನು ಪರಿಗಣಿಸಿದೆ ಎಂದು ತಿಳಿದು ಬಂದಿದೆ.
ಕೇಂದ್ರ ಸರ್ಕಾರ ಇದೇ 25ರಂದು ಸಂಜೆ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಣೆ ಮಾಡಲಿದ್ದು , ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರಿಗೆ ಪ್ರಶಸ್ತಿ ಲಭಿಸುವುದು ಬಹುತೇಕ ಖಚಿತವಾಗಿದೆ.
ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಎಸ್.ಎಲ್.ಭೈರಪ್ಪ ಅವರೊಂದಿಗೆ ಆರ್ಟ್ ಆಫ್ ಲೀವಿಂಗ್ ನ ರವಿಶಂಕರ್ ಗುರೂಜಿ ಸೇರಿದಂತೆ ಹಲವರಿಗೆ ಈ ಬಾರಿ ಪದ್ಮವಿಭೂಷಣ ಪ್ರಶಸ್ತಿ ದೊರೆಯುವ ಸಂಭವವಿದೆ. ಇದೇ 25ರಂದು ಕೇಂದ್ರ ಸರ್ಕಾರ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಅಧಿಕೃತವಾಗಿ ಘೋಷಣೆ ಮಾಡಲಿದೆ. ಗಣರಾಜ್ಯೋತ್ಸವ ದಿನದಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು 2014-15ನೆ ಸಾಲಿನ ಪ್ರಶಸ್ತಿಯನ್ನು ರಾಷ್ಟ್ರಪತಿ ಭವನದಲ್ಲಿ ವಿತರಣೆ ಮಾಡಲಿದ್ದಾರೆ.