ಬೆಂಗಳೂರು : 'ಅರ್ಕಾವತಿ ಡಿನೋಟಿಫಿಕೇಶನ್' ಹಗರಣದ ಸಂಬಂಧ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ನಡೆಸಲು ಬಿಜೆಪಿ ತೀರ್ಮಾನಿಸಿದೆ.
ಜ.14ರಂದು ಈ ಸಂಬಂಧ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಬೆಂಗಳೂರಿನ 7ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸತ್ಯಶೋಧನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್, ವಿ.ಸೋಮಣ್ಣ, ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಹಾಗೂ ಹಿರಿಯ ವಕೀಲರು ಉಪಸ್ಥಿತರಿದ್ದಾರೆ.
ಅರ್ಕಾವತಿ ಡಿನೋಟಿಫಿಕೇಶನ್ ಹಗರಣಕ್ಕೆ ಸಂಬಂಧಿಸಿದಂತೆ ಸಿ.ಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ಚಿಂತನೆ ನಡೆಸಿದ್ದು, ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದ ಸರ್ಕಾರದ ಕ್ರಮವನ್ನು ಬಿಜೆಪಿ ವಿರೋಧಿಸಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಹೋರಾಟ ನಡೆಸಲು ಮುಂದಾಗಿದೆ.