ನವದೆಹಲಿ : ಆಮ್ ಆದ್ಮಿ ಪಕ್ಷದ ಮಾಜಿ ನಾಯಕಿ ಶಾಜಿಯಾ ಇಲ್ಮಿ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ.
ಫೆ.7ರಂದು ದೆಹಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಶಾಜಿಯಾ ಇಲ್ಮಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿಯಿಂದ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಬಗ್ಗೆ ಜ.15ರಂದು ಶಾಜಿಯಾ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.
ಪಕ್ಷದಲ್ಲಿ ಸಾಮೂಹಿಕ ನಾಯಕತ್ವಕ್ಕೆ ಬೆಲೆ ಇಲ್ಲ. ಪಕ್ಷದಲ್ಲಿನ ಆಂತರಿಕ ಪ್ರಜಾಪ್ರಭುತ್ವ ಕಾಪಾಡುವಲ್ಲಿ ಅರವಿಂದ್ ಕೇಜ್ರಿವಾಲ್ ವಿಫಲರಾಗಿದ್ದಾರೆ ಎಂದು ಆರೋಪಿಸಿ ಶಾಜಿಯಾ ಇಲ್ಮಿ ಕಳೆದ ವರ್ಷ ಎಎಪಿಗೆ ರಾಜೀನಾಮೆ ನೀಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಗಾಜಿಯಾಬಾದ್ ನಿಂದ ಸ್ಪರ್ಧಿಸಿದ್ದ ಶಾಜಿಯಾ ಇಲ್ಮಿ, ಬಿಜೆಪಿಯ ವಿ.ಕೆ.ಸಿಂಗ್ ವಿರುದ್ಧ ಸೋಲನುಭವಿಸಿದ್ದರು.
ಈ ನಡುವೆ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ನಿಂದ ಕಿರಣ್ ವಾಲಿಯಾ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಈಬಾರಿ ದೆಹಲಿ ವಿಧಾನಸಭಾ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.