ಕೋಲ್ಕತ್ತಾ : 'ಪಶ್ಚಿಮ ಬಂಗಾಳ'ಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ ನೀಡಿದ್ದು, ರಾಜ್ಯದಲ್ಲಿ ನಡೆಯಲಿರುವ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ತಿಳಿಸಿದ್ದಾರೆ.
ಬುರ್ದ್ವಾನ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ಬಣ್ಣಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಯುಪಿಎ ಸರ್ಕಾರಕ್ಕೆ ಹಣದುಬ್ಬರ ದರವನ್ನು ಕಡಿಮೆ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ 7 ತಿಂಗಳಲ್ಲಿ ಹಣದುಬ್ಬರ ದರ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ದೆಹಲಿಯಲ್ಲಿ ಚುನಾವಣೆ ನಡೆಯುತ್ತಿದೆ. ಅದಾದ ನಂತರ ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲೂ ವಿಧಾನಸಭಾ ಚುನಾವಣೆ ನಡೆಯಲಿದ್ದು, ಎರಡೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವುದು ಖಚಿತ ಎಂದು ಅಮಿತ್ ಶಾ ಹೇಳಿದ್ದಾರೆ.
ಇದೇ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರದ 4 ಸಚಿವರು ಬಿಜೆಪಿ ಸೇರುವ ಸಾಧ್ಯತೆ ದಟ್ಟವಾಗಿದೆ. ತೃಣಮೂಲ ಕಾಂಗ್ರೆಸ್ ಗೆ ಅಘಾತ ಎದುರಾಗಲಿದೆ ಎಂದು ತಿಳಿದುಬಂದಿದೆ. ಮಮತಾ ಬ್ಯಾನರ್ಜಿ ಸಂಪುಟದ ರಾಚ್ ಪಾಲ್ ಸಿಂಗ್, ರಾಬಿ ರಂಜನ್ ಚಟರ್ಜಿ, ಕೃಷ್ಣೆಂದು ಚೌದರಿ, ಸಾಧನ್ ಪಾಂಡೆ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ತೃಣಮೂಲ ಕಾಂಗ್ರೆಸ್ ನ ಮಂಜುಳ್ ಕೃಷ್ಣ ಠಾಕೂರ್ ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ತೃಣಮೂಲ ಕಾಂಗ್ರೆಸ್ ನ ಸಂಸದ, ಮಾಜಿ ರೈಲ್ವೇ ಸಚಿವ ದಿನೇಶ್ ತ್ರಿವೇದಿಯೂ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.