ನವದೆಹಲಿ : 'ದೆಹಲಿ' ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಫೆ.4ರಂದು ದೆಹಲಿಯಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಜ.27ರಂದು ನಡೆದ ರ್ಯಾಲಿಗೆ ಉತ್ತಮ ಪ್ರತಿಕ್ರಿಯೆ ದೊರೆತಿರುವ ಹಿನ್ನೆಲೆಯಲ್ಲಿ ಫೆ4ರಂದು ಮತ್ತೊಂದು ರ್ಯಾಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ದೆಹಲಿಯ ಚಾಂದನಿ ಚೌಕ್ ನಿಂದ ಪ್ರಾರಂಭವಾಗುವ ರೋಡ್ ಶೋದಲ್ಲಿಯೂ ಸಹ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಂದನಿ ಚೌಕ್ ವ್ಯಾಪ್ತಿಗೆ ಬರುವ 4 ವಿಧಾನಸಭಾ ಕ್ಷೇತ್ರದ ಪೈಕಿ 3ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಮಾತಿಯಾ ಮಹಲ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಜೆಡಿಯು ಶಾಸಕ ಶೋಯೆಬ್ ಇಕ್ಬಾಲ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಫೆ.3ರಂದೇ ದೆಹಲಿಯಲ್ಲಿ ರಾಹುಲ್ ಗಾಂಧಿ ರ್ಯಾಲಿ ನಡೆಯಬೇಕಿತ್ತು. ಆದರೆ ಸ್ಥಳೀಯ ಆಡಳಿತದಿಂದ ಅನುಮತಿ ದೊರೆಯದ ಕಾರಣ ರಾಹುಲ್ ಗಾಂಧಿ ರ್ಯಾಲಿಯನ್ನು ಫೆ.4ರಂದು ನಡೆಸಲು ತೀರ್ಮಾನಿಸಲಾಗಿದೆ.