ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿ, ಮುಖ್ಯಮಂತ್ರಿ ಹುದ್ದೆ ಅಲಂಕರಿಸಲಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ಕೇಂದ್ರ ನಗರಾಭಿವೃಧ್ಧಿ ಸಚಿವ ಎಂ.ವೆಂಕಯ್ಯನಾಯ್ಡು ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.
ಈ ವೇಳೆ ಕೇಜ್ರಿವಾಲ್ ಗೆ ಮನೀಶ್ ಸಿಸೋಡಿಯಾ ಸಾಥ್ ನೀಡಿದರು. ಭೇಟಿ ವೇಳೆ ದೆಹಲಿಗೆ ರಾಜ್ಯದ ಸ್ಥಾನಮಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ಬಳಿಕ ಮಾತನಾಡಿದ ಸಿಸೋಡಿಯಾ, ದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನ ನೀಡುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತುಕತೆ ನಡೆಸಲಾಯಿತು ಎಂದಿದ್ದಾರೆ.
ಇತ್ತೀಚೆಗೆ ಕೇಂದ್ರ ಸರ್ಕಾರ ನಿರ್ಣಯ ಕೈಗೊಂಡಿರುವ ಬಗ್ಗೆ, ಅನಧಿಕೃತ ಕಾಲೋನಿಗಳ ವಿಚಾರ, ಶಾಲಾ-ಕಾಲೇಜುಗಳು, ಪಾರ್ಕಿಂಗ್ಗಳಿಗೆ ಭೂಮಿಯ ಅಗತ್ಯತೆ ಕುರಿತು ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.
ಇನ್ನು ಫೆ.12ರಂದು ಅರವಿಂದ್ ಕೇಜ್ರಿವಾಲ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಫೆ.14 ರಂದು ರಾಮ್ಲೀಲಾ ಮೈದಾನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಮಾರಂಭಕ್ಕೆ ಪ್ರಧಾನಿಯವರನ್ನು ಇದೇ ವೇಳೆ ಆಹ್ವಾನಿಸಲಿದ್ದಾರೆ.