BW News Bureau : ಬೆಂಗಳೂರಿನ ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣದ ಆರೋಪಿಗಳಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಲಭ್ಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳ ಕುರಿತು ವಿಶೇಷ ತನಿಖಾ ತಂಡಕ್ಕೆ ಖಚಿತ ಮಾಹಿತಿ ಲಭ್ಯವಾಗಿದ್ದು, ಎರಡು ಗುಂಪುಗಳ ಮೇಲೆ ಬಲವಾದ ಶಂಕೆ ವ್ಯಕ್ತವಾಗಿದೆ ಎಂದರು.
ಅಲ್ಲದೆ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಪ್ರಕರಣದ ತನಿಖೆಗೆ ಸಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದರು ಎಂದು ತಿಳಿಸಿದರು.
ಕಳೆದ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ಚರ್ಚ್ ಸ್ಟ್ರೀಟ್ ನಲ್ಲಿ ಬಾಂಬ್ ಸ್ಫೋಟಸಂಭವಿಸಿತ್ತು. ಘಟನೆಯಲ್ಲಿ ಚೆನ್ನೈ ನಿವಾಸಿ ಭವಾನಿ ಎಂಬ ಮಹಿಳೆ ಸಾವನ್ನಪ್ಪಿದ್ದರು. ತದನಂತರ ಘಟನೆಯ ತನಿಖೆಗಾಗಿ ಐದು ತಂಡಗಳನ್ನು ರಚಿಸಲಾಗಿತ್ತು.
ಏತನ್ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸದ್ದಾಂ ಹುಸೇನ್ (35), ಸೈಯದ್ ಇಸ್ಮಾಯಿಲ್ ಅಫಕ್ (35) ಎಂಬ ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಿದ್ದರು.