ನವದೆಹಲಿ : ಎಲ್ಲಾ ಧರ್ಮಗಳನ್ನು ಗೌರವಿಸುವುದು ನಮ್ಮ ಸಂಸ್ಕೃತಿಯಾಗಿದ್ದು ಪ್ರತಿ ಧರ್ಮಕ್ಕೂ ಸೂಕ್ತ ಪ್ರಾತಿನಿಧ್ಯ ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಇಬ್ಬರು ಭಾರತೀಯ ಕ್ರಿಶ್ಚಿಯನ್ನರಿಗೆ ಸಂತಪದವಿ ದೊರೆತಿರುವ ಹಿನ್ನೆಲೆಯಲ್ಲಿ ಕ್ರಿಶ್ಚಿಯನ್ ಸಮುದಾಯ ದೆಹಲಿಯ ವಿಜ್ನಾನ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತೀಯರಿಗೆ ಸಂತಪದವಿ ದೊರೆತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದ್ದಾರೆ.
ನಮ್ಮ ಸರ್ಕಾರ ಎಲ್ಲಾ ಧರ್ಮಗಳಿಗೂ ಅನಿರ್ಬಂಧಿತ ಹಕ್ಕು ನೀಡಿದೆ. ಧರ್ಮದ ಹೆಸರಿನಲ್ಲಿ ಹಿಂಸೆಯನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಧರ್ಮದ ಹೆಸರಿನಲ್ಲಿ ಹಿಂಸೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನಿ ಮೋದಿ ಎಚ್ಚರಿಸಿದ್ದಾರೆ. ಭಾರತದಲ್ಲಿ ಎಲ್ಲರೂ ಸಹೋದರತೆ, ಸಹಬಾಳ್ವೆಯಿಂದ ಜೀವಿಸಬೇಕೆಂದು ಮೋದಿ ಕರೆ ನೀಡಿದ್ದಾರೆ.
ಇದೇ ವೇಳೆ ಮಾತನಾಡಿದ ವಿತ್ತ ಸಚಿವ ಅರುಣ್ ಜೇಟ್ಲಿ, ಇತ್ತೀಚೆಗಷ್ಟೇ ಚರ್ಚ್ ಮೇಲೆ ನಡೆದ ದಾಳಿಯನ್ನು ಖಂಡಿಸಿದ್ದಾರೆ.