ನವದೆಹಲಿ : 'ಕಾಂಗ್ರೆಸ್' ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನು ನೇಮಿಸುವುದಾಗಲೀ ಅಥವಾ ಏಪ್ರಿಲ್ ನಲ್ಲಿ ಎಐಸಿಸಿ ಧಿವೇಶನ ನಡೆಯುವುದಾಗಲೀ ಇನ್ನೂ ನಿಶ್ಚಿತವಾಗಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗುವ ಸಾಧ್ಯತೆ ಇದೆಯೇ ಹೊರತು ಅಧ್ಯಕ್ಷ ಸ್ಥಾನ ಅಲಂಕರಿಸುವುದು ಖಾತ್ರಿಯಾಗಿಲ್ಲ ಎಂದು ಸ್ವತಃ ಕಾಂಗ್ರೆಸ್ ಮುಖಂಡರೇ ಸ್ಪಷ್ಟಪಡಿಸಿದ್ದಾರೆ.
ಎಕೆನಾಮಿಕ್ ಟೈಮ್ಸ್ ನೊಂದಿಗೆ ಮಾತನಾಡಿರುವ ಕಾಂಗ್ರೆಸ್ ಹಿರಿಯ ನಾಯಕರೊಬ್ಬರು, ರಾಹುಲ್ ಗಾಂಧಿ ಮಾರ್ಚ್ ಅಂತ್ಯದವೇಳೆಗೆ ಭಾರತಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಅಧಿವೇಶನಕ್ಕೆ ನೊಟೀಸ್ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನಮತ ಇದೆ ಎಂಬುದನ್ನು ಮಾಧ್ಯಮಗಳೊಂದಿಗೆ ಮಾತನಾಡಿದ ಹೆಸರು ಬಹಿರಂಗಪಡಿಸಲು ಇಚ್ಛಿಸದ ಕಾಂಗ್ರೆಸ್ ನಾಯಕರು ತಳ್ಳಿಹಾಕಿದ್ದಾರೆ. ರಾಹುಲ್ ಗಾಂಧಿ ರಾಜಕೀಯದಿಂದ ದೀರ್ಘಾವಧಿ ರಜೆ ತೆಗೆದುಕೊಳ್ಳುವುದಕ್ಕೆ ಸೋನಿಯಾ ಗಾಂಧಿ ಅವರಿಂದ ಯಾವುದೇ ಆಕ್ಷೇಪವಿಲ್ಲ. ರಾಹುಲ್ ಗಾಂಧಿ ಪಕ್ಷದ ನಾಯಕತ್ವ ವಹಿಸಿಕೊಳ್ಳುವುದನ್ನು ಎದುರುನೋಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಕಟ್ಟುವ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿವೆ ಎಂಬ ವದಂತಿ ಹಬ್ಬಿದೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು, ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನ ಅಲಂಕರಿಸುವುದರ ಬಗ್ಗೆ ಅನಿಶ್ಚಿತತೆ ಇದೆ ಎಂದು ಹೇಳಿದ್ದಾರೆ.