ಬೆಂಗಳೂರು : ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸಿಐಡಿ ಅಧಿಕಾರಿ ಪ್ರಣವ್ ಮೊಹಂತಿಯವರನ್ನು ಏಕಾಏಕಿ ವರ್ಗಾವಣೆ ಮಾಡಿರುವುದರ ಹಿಂದೆ ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರವಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲೇಬೇಕು ಅಲ್ಲಿಯವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
ಸಿಐಡಿ ಅಧಿಕಾರಿಯನ್ನು ಎತ್ತಂಗಡಿ ಮಾಡುವ ಮೂಲಕ ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಅಲ್ಲದೆ ದಕ್ಷ ಹಾಗೂ ಪ್ರಮಾಣಿಕ ಅಧಿಕಾರಿಯಾಗಿದ್ದ ಡಿ.ಕೆ.ರವಿ ಅವರ ತೇಜೋವಧೆ ಮಾಡುವ ಯತ್ನವನ್ನು ಮಾಡುತ್ತಿದೆ. ಇದನ್ನು ನಾವು ಸಹಿಸುವುದಿಲ್ಲ ಸಿಐಡಿ ತನಿಖೆಯಿಂದ ನ್ಯಾಯ ಸಿಗುವ ಭರವಸೆ ಇಲ್ಲ ಈ ಪ್ರಕರಣವನ್ನು ಸಿಬಿಐಗೆ ವಹಿಸಲೇಬೇಕು ಎಂದು ತಿಳಿಸಿದರು.
ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ಸಿಬಿಐಗೆ ವಹಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ಮನವಿ ಮಾಡುತ್ತೇವೆ ಎಂದು ಹೇಳಿದರು.