ಬೆಂಗಳೂರು : ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಪ್ರತಿಪಕ್ಷಗಳ ಸದಸ್ಯರು ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಪ್ರತಿಪಕ್ಷಗಳ ಮನವಿಗೆ ಪ್ರತಿಕ್ರಿಯಿಸಿರುವ ರಾಜ್ಯಪಾಲರು ಸಿ.ಎಂ ಸಿದ್ದರಾಮಯ್ಯ ಅವರನ್ನು ಕರೆಸಿ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ.
ಮಾಜಿ ಸಿ.ಎಂ ಕುಮಾರಸ್ವಾಮಿ, ಜಗದೀಶ್ ಶೆಟ್ಟರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಅವರ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಿಂದ ಪಾದಯಾತ್ರೆ ಕೈಗೊಂಡ, ಪ್ರತಿಪಕ್ಷಗಳ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ ಸರ್ಕಾರ ಡಿ.ಕೆ ರವಿ ಸಾವಿನ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಅಲ್ಲದೇ ಸಿಬಿಐ ತನಿಖೆಗೆ ವಹಿಸುವಂತೆ ಸೂಚನೆ ನೀಡುವ ಸಂಬಂಧ ಪರಿಶೀಲನೆ ನಡೆಸುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಸತ್ಯವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ. ಡಿ.ಕೆ ರವಿ ತೇಜೋವಧೆಗೆ ಸಿಎಂ ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಹೀಗಾಗಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.