ನವದೆಹಲಿ : 'ಭೂಸ್ವಾಧೀನ ಕಾಯ್ದೆ' ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸುವುದಕ್ಕೆ ನಿರಾಕರಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಯ್ದೆ ಬಗ್ಗೆ ಒಮ್ಮತ ಮೂಡಿಸುವ ಯತ್ನವನ್ನು ಹಾಸ್ಯಾಸ್ಪದ ಎಂದು ಹೇಳಿದ್ದಾರೆ.
ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಬಹಿರಂಗ ಚರ್ಚೆಗೆ ಆಗಮಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಬರೆದ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಸೋನಿಯಾ ಗಾಂಧಿ ತಾವು ಮಸೂದೆ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಯುಪಿಎ ಸರ್ಕಾರ ಜಾರಿಗೊಳಿಸಿದ್ದ ಮಸೂದೆಯನ್ನು ಯಥಾವತ್ತಾಗಿ ಜಾರಿಗೆ ತರಬೇಕೆಂದು ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.
ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸುವವರನ್ನು ದೇಶಧ್ರೋಹಿಗಳೆಂದು ಆರೋಪಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಸೋನಿಯಾ ಗಾಂಧಿ, ಸಣ್ಣ ಮನಸ್ಸಿನ ರಾಜಕೀಯವನ್ನು ಬಿಡುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ರೈತರನ್ನು ದೇಶದ ಬೆನ್ನೆಲುಬು ಎಂದು ಕರೆದಿರುವ ಸೋನಿಯಾ ಗಾಂಧಿ, ರೈತ ವಿರೋಧಿ ಕಾಯ್ದೆಯನ್ನು ಎಂದಿಗೂ ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೈಗಾರಿಕೋದ್ಯಮಿಗಳಿಗೆ ಅನುಕೂಲ ಮಾಡಿಕೊಡಲು ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ರೈತವಿರೋಧಿ ಕಾಯ್ದೆಯನ್ನು ಜಾರಿಗೊಳಿಸಿದ್ದು, ಈ ಬಗ್ಗೆ ತಾವು ಬಹಿರಂಗ ಚರ್ಚೆ ನಡೆಸಲು ಸಿದ್ಧರಿಲ್ಲ ಎಂದು ತಿಳಿಸಿದ್ದಾರೆ.
ನಿರಂತರವಾಗಿ ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸುತ್ತಿರುವ ವಿರೋಧ ಪಕ್ಷಗಳು ಹಾಗೂ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಗೆ ಬಹಿರಂಗ ಚರ್ಚೆಗೆ ಆಗಮಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸವಾಲು ಹಾಕಿದ್ದರು. ಅಣ್ಣಾ ಹಜಾರೆ ಮೋದಿ ಅವರೊಂದಿಗೆ ಚರ್ಚೆಗೆ ಸಿದ್ಧ ಎಂದು ಹೇಳಿದ್ದಾರೆ.