ಬೆಂಗಳೂರು : ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿಯೇ ಕೊಟ್ಟಿಲ್ಲ ಎಂದು ಕೇಂದ್ರ ಪರಿಸರ ಖಾತೆ ರಾಜ್ಯ ಸಚಿವ ಪ್ರಕಾಶ್ ಜಾವ್ಡೇಕರ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟುವುದು ಶತಃಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ ಬೆನ್ನಲ್ಲೇ, ಪ್ರಕಾಶ್ ಜಾವ್ಡೇಕರ್,ಕೇಂದ್ರ ಸರ್ಕಾರ ಅನುಮತಿಯೇ ಕೊಟ್ಟಿಲ್ಲ ಎಂದು ಹೇಳಿಕೆ ನೀಡುವ ಮೂಲಕ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಬಯಲಾದಂತಾಗಿದೆ.
ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕುರಿತಾಗಿ ಕರ್ನಾಟಕ ಸರ್ಕಾರದಿಂದ ಈವರೆಗೂ ಕೇಂದ್ರ ಸರ್ಕಾರಕ್ಕೆ ಯಾವುದೇ ಮನವಿ ಬಂದಿಲ್ಲ ಎಂದು ಜಾವ್ಡೇಕರ್ ಪ್ರತಿಕ್ರಿಯೆ ನೀಡಿದ್ದಾರೆ. ಮೇಕೆದಾಟು ಅಣೆಕಟ್ಟು ಯೋಜನೆಗೆ ಕರ್ನಾಟಕ ಸರ್ಕಾರ 25 ಕೋಟಿ ರೂಪಾಯಿ ಮೀಸಲಿಟ್ಟಿರುವ ಬಗ್ಗೆಯೂ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆಗೆ ವಿರೋಧ ವ್ಯಕ್ತಪಡಿಸಿ ರೈತಪರ ಸಂಘಟನೆಗಳು ತಮಿಳುನಾಡು ಬಂದ್ ಆಚರಿಸಿದ್ದವು. ಅಲ್ಲದೇ ತಮಿಳುನಾಡು ನಿಲುವು ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆ ನಡೆದಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೇಕೆದಾಟು ಅಣೆಕಟ್ಟು ನಿರ್ಮಿಸುವುದು ಶತಃಸಿದ್ಧ ಎಂದು ಹೇಳಿದ್ದರು. ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ್ದ ಅವರು, ಕಾವೇರಿ ನದಿ ನೀರಿನ ವಿಷಯದಲ್ಲಿ ತಮಿಳುನಾಡು ಪದೇ ಪದೇ ಕ್ಯಾತೆ ತೆಗೆಯುತ್ತಲೇ ಇರುತ್ತದೆ. ರಾಜಕೀಯ ಲಾಭಕ್ಕಾಗಿ ತಕರಾರು ಮಾಡುತ್ತಿದ್ದು, ಇದನ್ನು ಸಮರ್ಥವಾಗಿ ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಪ್ರತಿಕ್ರಿಯಿಸಿದ್ದರು.
ಈ ಮಧ್ಯೆ ಮೇಕೆದಾಟು ಅಣೆಕಟ್ಟು ಯೋಜನೆ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದನ್ನು ಖಂಡಿಸಿ, ವಾಟಾಳ್ ಪಕ್ಷ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳು ಏಪ್ರಿಲ್ 18ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದೆ.