ಭೋಪಾಲ್ : ತಮ್ಮ ವಿರುದ್ಧ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ನೀಡಿದ್ದ ವರ್ಣಭೇದ ಹೇಳಿಕೆ ಕುರಿತಂತೆ, ಕೀಳು ಮನಸ್ಥಿತಿ ಜನರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.
ಅಕಾಲಿಕ ಮಳೆಯಿಂದಾಗಿ ಬೆಳೆ ನಾಶಗೊಂಡ ಮಧ್ಯಪ್ರದೇಶದ ಗ್ರಾಮಗಳಿಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಕುಚಿತ ಬುದ್ಧಿಯ ಜನರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.
ಸೋನಿಯಾ ಗಾಂಧಿಯವರು ಬೆಳ್ಳಗಿರದಿದ್ದರೆ ಕಾಂಗ್ರೆಸ್ ಪಕ್ಷ ಅವರ ನಾಯಕತ್ವವನ್ನು ಒಪ್ಪಿಕೊಳ್ಳುತ್ತಿತ್ತೆ ಎಂದು ಗಿರಿರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಿಹಾರದ ಹಾಜಿಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ್ದ ಅವರು, ರಾಜೀವ್ ಗಾಂಧಿ ಅವರು ನೈಜೀರಿಯಾ ಮಹಿಳೆಯನ್ನು ಮದುವೆಯಾಗಿದ್ದರೆ ಹಾಗೂ ಆಕೆಯ ಚರ್ಮ ಬೆಳ್ಳಗಿರದಿದ್ದರೆ ಕಾಂಗ್ರೆಸ್ ಪಕ್ಷ ಆ ಮಹಿಳೆಯ ನಾಯಕತ್ವವನ್ನು ಒಪ್ಪಿಕೊಳ್ಳುತ್ತಿತ್ತೆ ಎಂದು ಪ್ರಶ್ನಿಸಿದ್ದರು.
ಈ ಹೇಳಿಕೆ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಗಿರಿರಾಜ್ ರಾಜೀನಾಮೆಗೆ ಪಟ್ಟು ಹಿಡಿದಿತ್ತು. ಏತನ್ಮಧ್ಯೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗಿರಿರಾಜ್ ಹೇಳಿಕೆ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡಿದ್ದರು. ನಂತರ ಸಿಂಗ್ ತನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರು.