ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಕಳೆದ 10 ತಿಂಗಳಿಂದ ಉತ್ತಮ ಆಡಳಿತ ನೀಡುತ್ತಿದೆ ಎಂದು ಶೇ.38ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ.
ಹೆಡ್ ಲೈನ್ಸ್ ಟು ಡೆ ನಡೆಸಿದ ಮೂಡ್ ಆಫ್ ನೇಷನ್ ಸಮೀಕ್ಷೆಯಲ್ಲಿ ಪ್ರಧಾನಿ ಮೋದಿ ಆಡಳಿತಕ್ಕೆ ದೇಶದ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅರವಿಂದ್ ಕೇಜ್ರಿವಾಲ್ ಪೈಕಿ ಪ್ರಧಾನಿ ನರೇಂದ್ರ ಮೋದಿ ಅವರೇ ದೇಶದ ಅತ್ಯುತ್ತಮ ಪ್ರಧಾನಿ ಎಂದು ಶೇ.30ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ.
ದೇಶಾದ್ಯಂತ ಶೇ.13ರಷ್ಟು ಜನರು ಮೋದಿ ಸರ್ಕಾರ ಭ್ರಷ್ಟಾಚಾರವನ್ನು ತೊಲಗಿಸುವಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದರೆ. ಶೇ.50ರಷ್ಟು ಜನರು ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿ ಹಾಗೂ ಉತ್ತಮ ಆಡಳಿತವನ್ನು ಪ್ರತಿನಿಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಶೇ.34ರಷ್ಟು ಮಂದಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ಅವರ ವ್ಯಕ್ತಿತ್ವ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಮೋದಿ ಹಿಂದೂ ರಾಷ್ಟ್ರೀಯತೆಯನ್ನು ಪ್ರತಿಬಿಂಬಿಸುತ್ತಾರಾ ಎಂಬ ಪ್ರಶ್ನೆಗೆ ಶೇ.16ರಷ್ಟು ಮಂದಿ ಮಾತ್ರ ಹೌದು ಎಂಬ ಉತ್ತರ ನೀಡಿದ್ದಾರೆ.
ಈಗ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ 27 ಸ್ಥಾನಗಳನ್ನು ಕಳೆದುಕೊಳ್ಳಲಿದ್ದು 255 ಸ್ಥಾನಗಳನ್ನು ಪಡೆಯಲಿದೆ ಎಂದು ಹೆಡ್ ಲೈನ್ಸ್ ಟು ಡೆ ಸಮೀಕ್ಷೆ ಹೇಳಿದೆ. ಒಟ್ಟಾರ ಮೋದಿ ಸರ್ಕಾರದ 10 ತಿಂಗಳ ಆಡಳಿತಕ್ಕೆ ದೇಶದ ಬಹುತೇಕ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.