ಬೆಳಗಾವಿ : ಪಕ್ಷದಲ್ಲಿ ಹೆಚ್ಚಿನ ಸ್ಥಾನಮಾನದ ಅಗತ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಈಗಾಗಲೇ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ ನೀಡಿದ್ದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸಂಘಟನೆ ಮೂಲಕ ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇನೆ ಎಂದರು.
ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಯಶಸ್ವಿಯಾಗಿದೆ. ಬಿಜೆಪಿ ಪಕ್ಷ ಸಂಘಟನೆ ನಿಟ್ಟಿನಲ್ಲಿ ಇದು ಹೆಚ್ಚಿನ ಮಹತ್ವ ಪಡೆದುಕೊಂಡಿತ್ತು. ಅದೇ ರೀತಿ ಬಿಜೆಪಿ ಸದಸ್ಯತ್ವ ಅಭಿಯಾನವೂ ಕೂಡ ಯಶಸ್ವಿಯಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಮಾಡಿರುವ ಕೇಂದ್ರ ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿಧೇಯಕ ರೈತ ವಿರೋಧಿಯಾಗಿಲ್ಲ. ಅದು ರೈತ ಪರವಾಗಿದ್ದು, ಅಪಪ್ರಚಾರ ಮಾಡಲಾಗುತ್ತಿದೆ. ವಾಸ್ತವಾಂಶವನ್ನು ರೈತರಿಗೆ ಮನವರಿಕೆ ಮಾಡಿಕೊಟ್ಟರೆ ರೈತರ ಪರವಾಗಿ ದೃಢಪಡಲಿದೆ ಎಂದರು.