ನವದೆಹಲಿ : ಏ.9ರೊಳಗೆ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. ಕಳೆದ 10 ತಿಂಗಳ ಅವಧಿಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರದ ಸಂಪುಟ ಎರಡನೇ ಪುನಾರಚನೆಯಾಗಲಿದೆ.
ಬಿಹಾರದಲ್ಲಿ ಸಧ್ಯದಲ್ಲೇ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಹಾರದ ಬಿಜೆಪಿ ಮುಖಂಡ ಹಾಗೂ ಪಿಡಿಪಿ, ಶಿವಸೇನೆಯ ನಾಯಕರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯುವ ಸಾಧ್ಯತೆಗಳಿವೆ. ಹೊಸ ಸಚಿವರು ಸೇರ್ಪಡೆಯಾಗಲಿರುವ ಹಿನ್ನೆಲೆಯಲ್ಲಿ ಸಂಪುಟದ ಕೆಲ ಸಚಿವರಿಗೆ ಬಡ್ತಿ ದೊರೆಯುವ ಸಾಧ್ಯತೆ ಇದೆ.
ಅಲ್ಪಸಂಖ್ಯಾತ ಹಾಗೂ ಸಂಸದೀಯ ವ್ಯವಹಾರ ಖಾತೆಯ ರಾಜ್ಯ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, ಕೌಶಲ್ಯ ಅಭಿವೃದ್ಧಿ ಮತ್ತು ಎಂಟರ್ಪ್ರಿನರ್ಶಿಪ್ ರಾಜೀವ್ ಪ್ರತಾಪ್ ರೂಢಿ ಅವರಿಗೆ ಬಡ್ತಿ ದೊರೆಯುವ ಸಾಧ್ಯತೆ ಇದೆ. ಇನ್ನು ರೈಲ್ವೆ ಖಾತೆ ರಾಜ್ಯ ಸಚಿವ ಮನೋಜ್ ಸಿನ್ಹಾ, ಹಣಕಾಸು ಖಾತೆ ರಾಜ್ಯ ಸಚಿವ ಜಯಂತ್ ಸಿನ್ಹಾ ಅವರಿಗೆ ಹೆಚ್ಚುವರಿ ಖಾತೆಗಳನ್ನು ನೀಡುವ ಸಾಧ್ಯತೆ ಇದೆ.
ಇನ್ನು ಜಮ್ಮು-ಕಾಶ್ಮೀರ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಜಮ್ಮು-ಕಾಶ್ಮೀರ ಉಸ್ತುವಾರಿ ರಾಮ್ ಮಾಧವ್ ಅವರಿಗೂ ಸಹ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯುವ ಸಾಧ್ಯತೆ ಇದೆ.