ಬೆಂಗಳೂರು : 'ತಮಿಳುನಾಡು' ಸರ್ಕಾರ ಮೇಕೆದಾಟು ಯೋಜನೆಗೆ ವಿರೋಧಿಸುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಏ.18ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಏ.6ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕನ್ನಡ ವಾಟಾಳ್ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್, ಏ.18ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ವಾಟಾಳ್ ನಾಗರಾಜ್ ಕರೆ ನೀಡಿರುವ ಬಂದ್ ಗೆ ಕನ್ನಡ ಒಕ್ಕೂಟದ ಆಶ್ರಯದಲ್ಲಿ ಕರ್ನಾಟಕ ಬಂದ್ ನಡೆಯಲಿದೆ.
ಏ.18ರಂದು ನಡೆಯಲಿರುವ ಬಂದ್ ಗೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ, ಸಾಹಿತಿ ಚಂದ್ರಶೇಖರ ಪಾಟೀಲ್, ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ ಗೋವಿಂದು ಸೇರಿದಂತೆ ಹಲವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಯೋಜನೆಯನ್ನು ವಿರೋಧಿಸಿ ತಮಿಳುನಾಡಿನಲ್ಲಿ ಇತ್ತೀಚೆಗಷ್ಟೇ ಬಂದ್ ನಡೆಸಲಾಗಿತ್ತು.
ಯೋಜನಗೆ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರದ ವಿರುದ್ಧವೂ ಕರ್ನಾಟಕದಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ರಾಜ್ಯದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟುವುದು ಶತಃಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ ಬೆನ್ನಲ್ಲೇ ಎರಡೂ ರಾಜ್ಯಗಳಲ್ಲೂ ಪರ-ವಿರೋಧದ ಪ್ರತಿಭಟನೆಗಳು ನಡೆಯುತ್ತಿವೆ.