BW News Bureau : 'ಬಿಬಿಎಂಪಿ' ಚುನಾವಣೆ ನಡೆಸುವ ವಿಚಾರದಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತೀರ್ಪನ್ನು ಹೈಕೋರ್ಟ್ ನ ದ್ವಿಸದಸ್ಯ ಪೀಠ ರದ್ದುಗೊಳಿಸಿದೆ.
ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿಯ ವಿಚಾರಣಯನ್ನು ಏ.24ರಂದು ಇತ್ಯರ್ಥಗೊಳಿಸಿರುವ ವಿಭಾಗೀಯ ಪೀಠ, ಏಕ ಸದಸ್ಯಪೀಠದ ಆದೇಶವನ್ನು ರದ್ದುಗೊಳಿಸಿ ಚುನಾವಣೆ ನಡೆಸಲು ಸರ್ಕಾರಕ್ಕೆ ಕಾಲಾವಕಾಶ ನೀಡಿದೆ.
ಬಿಬಿಎಂಪಿ ಚುನಾವಣೆ ನಡೆಸುವ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿದ್ದ ರಾಜ್ಯ ಸರ್ಕಾರ, ಚುನಾವಣೆ ನಡೆಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿತ್ತು. ರಾಜ್ಯ ಸರ್ಕಾರದ ಮನವಿಯನ್ನು ಪುರಸ್ಕರಿಸಿರುವ ನ್ಯಾ.ಡಿ.ಹೆಚ್ ವಘೇಲಾ, ನ್ಯಾ.ರಾಮಮೋಹನ್ ರೆಡ್ಡಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಕಾಲಾವಕಾಶ ನೀಡಿದೆ.
ಮೇ.31ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನ ಏಕಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಕೋರ್ಟ್ ತೀರ್ಪಿಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ, ಈ ತೀರ್ಪು ತಮಗೆ ಆಶ್ಚರ್ಯ ತಂದಿಲ್ಲ. ಇಂತಹ ತೀರ್ಪನ್ನು ಮೊದಲೇ ನಿರೀಕ್ಷಿಸಿದ್ದೆ ಎಂದು ಹೇಳಿದ್ದಾರೆ. ಶತಾಯಗತಾಯ ಪಾಲಿಕೆ ವಿಭಜನೆಗೆ ಸರ್ಕಾರ ಸಿದ್ಧತೆ ನಡೆಸಿದೆ. ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಿಸಿದೆ. ಇದು ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂದು ಕಾದು ನೋಡಬೇಕಿದೆ ಎಂದು ಹೇಳಿದ್ದಾರೆ.